
- ಬೇಲೂರು ಕ್ಷೇತ್ರದ ಸಮಸ್ಯೆ ಬಗ್ಗೆ ಸುರೇಶ್ ಪ್ರಸ್ತಾಪ
ವಿಧಾನಸಭೆ (ಮಾ.12): ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಮಸ್ಯೆ ಕುರಿತು ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ಅವರು ಸರ್ಕಾರದ ಗಮನ ಸೆಳೆಯುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭಾವಿ ಮುಖ್ಯಮಂತ್ರಿ ಎಂದು ಸಂಬೋಧಿಸಿ, ತಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು.
ಎತ್ತಿನಹೊಳೆ ಕಾಮಗಾರಿಯಿಂದಾಗಿ ರಸ್ತೆ ಸಂಪರ್ಕ ಹಾಳಾಗಿರುವುದನ್ನು ಸರಿಪಡಿಸಬೇಕು ಎಂದು ಮನವಿ ಮಾಡುತ್ತಾ, ಭಾವಿ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್ ಅವರು ನಮ್ಮ ಕ್ಷೇತ್ರದ ಸಮಸ್ಯೆ ನಿವಾರಿಸಲು ಮನಸು ಮಾಡಬೇಕು. ಎತ್ತಿನಹೊಳೆ ಕಾಮಗಾರಿಯಿಂದ ಬೇಲೂರು ಕ್ಷೇತ್ರದಲ್ಲಾಗಿರುವ ಸಮಸ್ಯೆಗಳನ್ನು ನಿವಾರಿಸಲು 500 ಕೋಟಿ ರು. ಅನುದಾನಕ್ಕಾಗಿ ಬೇಡಿಕೆಯಿಟ್ಟಿದ್ದೆ. ಅದರಲ್ಲಿ ಈ ಹಿಂದೆ 35 ಕೋಟಿ ರು. ನೀಡಿದ್ದರು. ಅದರ ಜತೆಗೆ ಈಗ 50 ಕೋಟಿ ರು. ನೀಡುವುದಾಗಿ ಭಾವಿ ಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಆ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಕೋರಿದರು.
ಅದಕ್ಕೆ ಡಿ.ಕೆ.ಶಿವಕುಮಾರ್, ಎತ್ತಿನಹೊಳೆ ಯೋಜನೆಗಾಗಿ ಸಕಲೇಶಪುರ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿದ್ದೇವೆ. ಈಗ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಎತ್ತಿನಹೊಳೆ ಯೋಜನೆಗಾಗಿ ಇದ್ದ ತಡೆ ನಿವಾರಿಸಿ, ಅರಣ್ಯ ಭೂಮಿ ಬಳಕೆಗೆ ಅನುಮತಿಸಿದೆ ಎಂಬ ಮಾಹಿತಿಯಿದೆ. ಆ ಹಿನ್ನೆಲೆಯಲ್ಲಿ ಯೋಜನೆಯನ್ನು ಮುಂದುವರಿಸಬೇಕು. ಅದರ ಕ್ಷೇತ್ರಗಳ ಸಮಸ್ಯೆಗಳಿಗೂ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ