ಬಿಜಿಎಸ್‌ಗೆ ಡೀಮ್ಡ್ ವಿವಿ ಪಟ್ಟ: ಎಚ್‌ಡಿಕೆ ಭರವಸೆ

Published : Nov 24, 2018, 10:17 AM IST
ಬಿಜಿಎಸ್‌ಗೆ ಡೀಮ್ಡ್ ವಿವಿ ಪಟ್ಟ: ಎಚ್‌ಡಿಕೆ ಭರವಸೆ

ಸಾರಾಂಶ

ಬಿಜಿಎಸ್‌ ಶಿಕ್ಷಣ ಸಂಸ್ಥೆಯನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ರೂಪಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅಶ್ವಾಸನೆ ನೀಡಿದ್ದಾರೆ.

ಬೆಂಗಳೂರು[ನ.24]: ಬಿಜಿಎಸ್‌ ಶಿಕ್ಷಣ ಸಂಸ್ಥೆಯನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ರೂಪಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಶ್ವಾಸನೆ ನೀಡಿದ್ದಾರೆ.

ಶುಕ್ರವಾರ ನಗರದ ಕೆಂಗೇರಿಯಲ್ಲಿನ ಬಿಜಿಎಸ್‌ ಹೆಲ್ತ್‌ ಮತ್ತು ಎಜುಕೇಷನ್‌ ಸಿಟಿ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಬಾಲಗಂಗಾಧರ ನಾಥ ಶಿಕ್ಷಣ ಟ್ರಸ್ಟ್‌ನ 11ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಮತ್ತು ಬಿಜಿಎಸ್‌ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ಗೆ ಉನ್ನತ ಸ್ಥಾನ ಇದೆ. ಬಾಲಗಂಗಾಧರನಾಥ ಸ್ವಾಮೀಜಿಗಳ ಅವಿರತ ಶ್ರಮದಿಂದ ರಾಜ್ಯದ ಅನೇಕ ಕಡೆ ಬಿಜಿಎಸ್‌ ಶಿಕ್ಷಣ ಸಂಸ್ಥೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಬಿಜಿಎಸ್‌ ಶಿಕ್ಷಣ ಸಂಸ್ಥೆಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಲು ಮತ್ತು ಡೀಮ್‌್ಡ ವಿಶ್ವವಿದ್ಯಾಲಯವನ್ನಾಗಿ ಮಾಡಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಿಕ್ಷಣ ಸಂಸ್ಥೆಯಲ್ಲಿ 1.30 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಬೃಹತ್‌ ಆಲದ ಮರದ ರೀತಿಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬಿಜಿಎಸ್‌ ಶಿಕ್ಷಣ ಸಂಸ್ಥೆಯು ಸಣ್ಣಪುಟ್ಟಕುಗ್ರಾಮಗಳಲ್ಲಿಯೂ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಶಿಕ್ಷಣ ಜತೆಗೆ ಧಾರ್ಮಿಕ ಬೋಧನೆಯನ್ನು ಸಹ ಮಾಡುವ ಮೂಲಕ ಧಾರ್ಮಿಕತೆ, ಸಾಂಸ್ಕೃತಿಕತೆ ವೈಭವವನ್ನು ಸಾರುತ್ತಿದೆ. ಬಾಲಗಂಗಾಧರ ನಾಥ ಸ್ವಾಮೀಜಿ ಹಚ್ಚಿರುವ ಅಣತೆಯನ್ನು ನಿರ್ಮಲಾನಂದ ಸ್ವಾಮೀಜಿ ಪ್ರಜ್ವಲಿಸುವಂತೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೈತ್ರಿಸರ್ಕಾರವು ಸರ್ಕಾರ ಶಾಲೆಗಳ ಗುಣಮಟ್ಟತೆಯನ್ನು ಹೆಚ್ಚಿಸುವತ್ತ ಗಮನಹರಿಸಿದೆ. ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ನೀಡಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಂತೆ ಕಾರ್ಯನಿರ್ವಹಿಸಲು ಅನೇಕ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದಿದ್ದಾರೆ.

ಕೇಂದ್ರದ ಭರವಸೆ:

ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಬಿಜಿಎಸ್‌ ವಿದ್ಯಾಸಂಸ್ಥೆಯನ್ನು ಡೀಮ್‌್ಡ ವಿಶ್ವವಿದ್ಯಾಲಯವನ್ನಾಗಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿದರೆ ಅದರ ಕೆಲಸವನ್ನು ಮಾಡಿಸುತ್ತೇನೆ ಎಂದು ತಿಳಿಸಿದರು.

ಇಡೀ ಸಾಮಾಜಿಕ ಬದಲಾವಣೆ, ಒಕ್ಕಲಿಗರ ಹಿತರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದವರು ಬಾಲಗಂಗಾಧರನಾಥ ಸ್ವಾಮೀಜಿ. ಭವಿಷ್ಯದ ಯುವ ಪೀಳಿಗೆಗೆ ಅವರ ಸೇವಾ ಕಾರ್ಯ ತಿಳಿಸಬೇಕಿದೆ. ಒಂದು ದೊಡ್ಡ ಸಂಸ್ಥೆಯನ್ನು ಕಟ್ಟಿಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನನ್ನ ಬೆಳವಣಿಗೆಗೂ ಅವರ ಪಾತ್ರ ಬಹಳ ದೊಡ್ಡದು. ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ ಪ್ರಮುಖ ಧ್ಯೇಯವಾಗಿತ್ತು. ಬಾಲಗಂಗಾಧರನಾಥ ಸ್ವಾಮೀಜಿ ಒಕ್ಕಲಿಗರ ಸಮಸ್ಯೆಗಳನ್ನು ಅರಿತಿದ್ದರು. ಎಲ್ಲಾ ಸಮಸ್ಯೆಗಳನ್ನುಪರಿಹರಿಸುವ ಕೆಲಸ ಮಾಡಿದ್ದರು ಎಂದು ಹೇಳಿದರು.

ಬಿಜಿಎಸ್‌ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಪುಟ್ಟರಾಜು ಮತ್ತು ಕೆ.ಎಸ್‌.ಕುಮಾರಸ್ವಾಮಿ ಅವರಿಗೆ ಬಿಜಿಎಸ್‌ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಕ್ಕೂ ಮುನ್ನ ವೈಭವಯುತ ರಥದಲ್ಲಿ ಡಾ. ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಪ್ರತಿಮೆಯನ್ನು ವೇದಿಕೆಗೆ ಕರೆತರಲಾಯಿತು.

ಕಾರ್ಯಕ್ರಮದಲ್ಲಿ ಆದಿಚುಂಚನ ಗಿರಿ ಮಠದ ಮಠಾಧೀಶರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ನಟ ಪ್ರಜ್ವಲ್‌ ದೇವರಾಜ್‌, ಸಂಸದ ಶಿವರಾಮೇಗೌಡ, ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ರವೀಂದ್ರನಾಥ್‌ ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!