
ಬೆಂಗಳೂರು[ಅ.26]: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸ್ವಾಗತ ಕೋರಲು ರಾಜ್ಯ ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಧ್ಯಾಹ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಲಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಿಂದ ಆಗಮಿಸುವಾಗ ದೇವನಹಳ್ಳಿ ಸುಂಕ ವಸೂಲಾತಿ ಕೇಂದ್ರದಿಂದ ಅದ್ಧೂರಿ ರೋಡ್‌ಶೋ ನಡೆಸುವ ಮೂಲಕ ಸ್ವಾಗತ ಕೋರಲು ಎನ್‌ಎಸ್‌ಯುಐ ಕಾರ್ಯಕರ್ತರು ಮುಂದಾಗಿದ್ದಾರೆ. ಎನ್‌ಎಸ್‌ಯುಐ ರಾಜ್ಯ ಘಟಕದ ವತಿಯಿಂದ ಬೈಕ್ ರಾರಯಲಿ ಆಯೋಜಿಸಿದ್ದು, ನೂರಾರು ಮಂದಿ ಬೈಕ್ ರಾರಯಲಿ ಮೂಲಕ ಡಿ.ಕೆ. ಶಿವಕುಮಾರ್ ಅವರನ್ನು ಕರೆತರಲಿದ್ದಾರೆ ಎಂದು ತಿಳಿದುಬಂದಿದೆ.
ಡಿ.ಕೆ. ಶಿವಕುಮಾರ್ ಅವರಿಗೆ ಕೆಪಿಸಿಸಿ ಕಚೇರಿ ಬಳಿ ಸ್ವಾಗತ ಕೋರಲು ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಲು ಪಕ್ಷ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಕೆಪಿಸಿಸಿ ಕಚೇರಿಗೆ ಬರಲು ದೂರವಾಣಿ ಮೂಲಕ ಸೂಚನೆ ನೀಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಕೋರುವಂತೆ ಸೂಚನೆ ನೀಡಲಾಗಿದೆ.
ಕೆಪಿಸಿಸಿ ಕಚೇರಿಗೆ ಆಗಮಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ವಿವಿಧ ಹಿರಿಯ ನಾಯಕರು ಉಪಸ್ಥಿತರಿರಲಿದ್ದು, ಡಿ.ಕೆ. ಶಿವಕುಮಾರ್ ಅವರನ್ನು ಸ್ವಾಗತಿಸಲಿದ್ದಾರೆ. ಇದೇ ವೇಳೆ ಬಂಧನ ಹಾಗೂ ಬಿಡುಗಡೆ ಹಿಂದಿನ ರಾಜಕೀಯ ಪ್ರಯತ್ನಗಳ ಬಗ್ಗೆಯೂ ನಾಯಕರು ಮಾತನಾಡಲಿದ್ದಾರೆ. ಬಳಿಕ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ