
ಬೆಂಗಳೂರು(ಫೆ.28): ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಗುರಿಯನ್ನು ಮೀರಿ ಶೇ.126ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಗ್ರೀನ್‌ಲೇಸರ್ ಚಿಕಿತ್ಸೆ ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಅಂಧತ್ವ ನಿವಾರಣೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಪ್ರಸಕ್ತ ಸಾಲಿನಲ್ಲಿ 3,39,600 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ನಿರೀಕ್ಷೆಗೂ ಮೀರಿ ಗುರಿ ಸಾಧಿಸಲಾಗಿದ್ದು ಈಗಾಗಲೇ 4,28,451 ಶಸ್ತ್ರಚಿಕಿತ್ಸೆ ಮಾಡಿ ಒಟ್ಟಾರೆ ಶೇ.126 ರಷ್ಟುಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮಧುಮೇಹದಿಂದ ರೆಟಿನೋಪತಿ ಸಮಸ್ಯೆಗೆ ಒಳಗಾದರೆ ಕ್ರಮೇಣ ದೃಷ್ಟಿಗೆ ಹಾನಿಯಾಗುವ ಸಂಭವ ಇರುತ್ತದೆ. ಇದನ್ನು ಪತ್ತೆ ಮಾಡಿ ಅಗತ್ಯ ಕಂಡುಬಂದಲ್ಲಿ ಗ್ರೀನ್ ಲೇಸರ್ ಚಿಕಿತ್ಸೆ ನೀಡಿ ಸಮಸ್ಯೆ ಪರಿಹರಿಸಬಹುದಾಗಿದೆ. ಡಯಾಬಿಟಿಕ್ ರೆಟಿನೋಪತಿಗೆ ಒಳಗಾದವರಿಗೆ ಎಷ್ಟುಬೆಳಕಿದ್ದರೂ ಕಾಣುವುದಿಲ್ಲ. ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅನೇಕರು ಡಯಾಬಿಟಿಕ್ ರೆಟಿನೋಪತಿ ಸಮಸ್ಯೆಗೆ ಒಳಗಾಗುತ್ತಿದ್ದು, ಇದಕ್ಕಾಗಿ ಅತ್ಯಾಧುನಿಕ ಗ್ರೀನ್ ಲೇಸರ್ ಚಿಕಿತ್ಸೆ ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.
2 ದಿನದಲ್ಲಿ ಎನ್ನೆಚ್ಚೆಂ ನೌಕರರ ವೇತನ 15% ಹೆಚ್ಚಳ: ಸಚಿವ ಸುಧಾಕರ್
ವಿಜಯಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ತಜ್ಞರು ವಿಶೇಷ ಪರಿಣತಿ ಪಡೆದು ಇಂತಹ ವಿನೂತನ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಮಾಡುತ್ತಿದ್ದು ಉತ್ತಮ ಫಲಿತಾಂಶ ದೊರೆಯುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಒಂದು ತಿಂಗಳಿಂದ 40 ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಚಿಕಿತ್ಸೆಯನ್ನು ಇತರೆ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ಗ್ರಾಮೀಣ ಭಾಗದಲ್ಲಿ ರೋಗಿಗಳನ್ನು ಪರಿಶೀಲನೆ ಮಾಡಿ ಚಿಕಿತ್ಸೆ ಅಗತ್ಯವಿರುವವರನ್ನು ಜಿಲ್ಲಾ ಹಂತಕ್ಕೆ ಶಿಫಾರಸು ಮಾಡಲಾಗುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಹೇಳಿದ್ದಾರೆ.
Ayushman Bharat: 3 ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್: ಡಾ.ಕೆ.ಸುಧಾಕರ
ಉತ್ತಮ ಪ್ರತಿಕ್ರಿಯೆ:
‘ಬಳ್ಳಾರಿ ಅಂಧತ್ವ ಮುಕ್ತ ಜಿಲ್ಲೆ’ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಬಳ್ಳಾರಿ ಜಿಲ್ಲೆಯ ಪ್ರತಿಯೊಂದು ತಾಲೂಕುಗಳಲ್ಲಿ ವಿಶೇಷ ಸಂಚಾರಿ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಶಿಬಿರದಲ್ಲಿ ಸರಾಸರಿ 22 ಮಂದಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಂಚಾರಿ ಆರೋಗ್ಯ ಘಟಕದಿಂದ ತಪಾಸಣೆ ಶಿಬಿರ ನಡೆಸಲಾಗುತ್ತಿದೆ. ಬಳ್ಳಾರಿ, ಸಂಡೂರು, ಸಿರುಗುಪ್ಪದಲ್ಲಿ ಪ್ರತಿ ತಿಂಗಳು ಎರಡು ಶಿಬಿರ ನಡೆಯುತ್ತಿದೆ. ಶೇ.98 ರಷ್ಟುಬಿಪಿಎಲ್ ಕುಟುಂಬದ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದು, ಶೇ.60 ರಿಂದ 70 ರಷ್ಟುಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಾರಿ 22 ಮಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈ ಪೈಕಿ 17 ಮಹಿಳೆಯರು ಮತ್ತು ಐವರು ಪುರುಷರಾಗಿದ್ದಾರೆ. ಅಂಧತ್ವ ಮುಕ್ತ ಬಳ್ಳಾರಿ ಅಭಿಯಾನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕನ್ನಡಕ, ಕ್ಯಾಟರಾಕ್ಟ್ ಸರ್ಜರಿ ಮಾಡಲಾಗುತ್ತಿದೆ. ಈವರೆಗೆ 12,668 ಮಂದಿಗೆ ನೇತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ