Kannada Signboards in Kasaragod: ಕಾಸರಗೋಡಲ್ಲಿ ಕನ್ನಡ ಫಲಕ ಅಳವಡಿಸುವಂತೆ ಕೇರಳಕ್ಕೆ ಕೇಂದ್ರ ನಿರ್ದೇಶನ

Kannadaprabha News, Ravi Janekal |   | Kannada Prabha
Published : Sep 26, 2025, 09:31 AM IST
Kasaragodu kannada name plate

ಸಾರಾಂಶ

ಕೇಂದ್ರ ಅಲ್ಪಸಂಖ್ಯಾತರ ಇಲಾಖೆಯ ನಿರ್ದೇಶನದಂತೆ, ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕೇರಳ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ, ಗಡಿನಾಡಿನ ಕನ್ನಡ ಹೋರಾಟಗಾರ ಕಯ್ಯಾರ ಕಿಂಞಣ್ಣ ರೈ ಸಾಂಸ್ಕೃತಿಕ ಭವನ ನಿರ್ಮಾಣ ಶೀಘ್ರದಲ್ಲೇ ಲೋಕಾರ್ಪಣೆ..

ಮಂಗಳೂರು(ಸೆ.26): ರಾಜ್ಯದ ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕೇಂದ್ರ ಅಲ್ಪಸಂಖ್ಯಾತರ ಇಲಾಖೆಯು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸಕಾರತ್ಮಕವಾಗಿ ಸ್ಪಂದಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಮಾಯ

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಕ್ಷೀಣಿಸುತ್ತಿರುವ ಬಗ್ಗೆ ಬಂದ ದೂರುಗಳ ಆಧಾರದಲ್ಲಿ ಕೇಂದ್ರ ಅಲ್ಪಸಂಖ್ಯಾತರ ಇಲಾಖೆಗೆ ಪ್ರಾಧಿಕಾರದಿಂದ ಪತ್ರ ಬರೆಯಲಾಗಿತ್ತು. ಕೇಂದ್ರ ಇಲಾಖೆಯು ಕೇರಳ ಸರ್ಕಾರಕ್ಕೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇರಳ ಸರ್ಕಾರ, ಗಡಿನಾಡಿನ ಬಸ್‌ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ಸೇರಿದಂತೆ ಈ ಹಿಂದೆ ಇದ್ದ ಕಡೆಗಳಲ್ಲೆಲ್ಲ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ವಹಿಸುವಂತೆ ಎನ್‌ಎಚ್‌ಎಐ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ ಎಂದು ತಿಳಿಸಿದರು.

ಗಡಿ ಶಾಲೆಗಳಿಗೆ ಕನ್ನಡ ಪತ್ರಿಕೆ:

ಪ್ರಾಧಿಕಾರದ ವ್ಯಾಪ್ತಿಗೆ ಬರುವ 6 ರಾಜ್ಯಗಳ, 19 ಜಿಲ್ಲೆಗಳ 658 ಕನ್ನಡ ಶಾಲೆಗಳಲ್ಲಿ 1.09 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಶಾಲೆಗಳಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಪ್ರಾಧಿಕಾರ ನೆರವು ನೀಡುತ್ತಿದೆ. ಈ ಶಾಲೆಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಪೂರೈಸುವ ಪ್ರಸ್ತಾಪ ಇದೆ ಎಂದು ತಿಳಿಸಿದರು.

ಕಯ್ಯಾರ ಸ್ಮರಣಾರ್ಥ ಸಾಂಸ್ಕೃತಿಕ ಭವನ:

ಗಡಿನಾಡಿನ ಕನ್ನಡಪರ ಹೋರಾಟಗಾರ, ಸಾಹಿತಿ ಕಯ್ಯಾರ ಕಿಂಞಣ್ಣ ರೈ ಸ್ಮರಣಾರ್ಥ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರಡಾಲದಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸಾಂಸ್ಕೃತಿಕ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅ.27ರಂದು ಲೋಕಾರ್ಪಣೆಯಾಗಲಿದೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇವೆ. ಇದಕ್ಕಾಗಿ ಕಯ್ಯಾರರ ಕುಟುಂಬಸ್ಥರು 1 ಎಕರೆಗೂ ಅಧಿಕ ಜಾಗವನ್ನು ಉಚಿತವಾಗಿ ಬಿಟ್ಟುಕೊಟ್ಟಿದ್ದಾರೆ ಎಂದು ಬೇವಿನಮರದ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌