
ಬೆಂಗಳೂರು (ಆ.16): ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ(Chandrashekaranatha Swamiji) (75) ಅವರು ತಡರಾತ್ರಿ 12:01ರ ಸುಮಾರಿಗೆ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಕೆಂಗೇರಿಯಲ್ಲಿ ಶ್ರೀಮಠವನ್ನು ಸ್ಥಾಪಿಸಿ, ಶಿಕ್ಷಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದ ಸ್ವಾಮೀಜಿಯವರ ನಿಧನಕ್ಕೆ ಭಕ್ತರು ಮತ್ತು ಧಾರ್ಮಿಕ ಮುಖಂಡರು ಕಂಬನಿ ಮಿಡಿದಿದ್ದಾರೆ.
1974ರಲ್ಲಿ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠವು ಅಸ್ತಿತ್ವಕ್ಕೆ ಬಂದಿತ್ತು. ಆಗಿನಿಂದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಪೀಠಾಧಿಪತಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯವರು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ತಡರಾತ್ರಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.
ಅಂತಿಮ ದರ್ಶನಕ್ಕೆ ವ್ಯವಸ್ಥೆ:
ಸ್ವಾಮೀಜಿಯವರ ಅಂತಿಮ ದರ್ಶನವನ್ನು ಇಂದು ಶ್ರೀಮಠದ ಆವರಣದಲ್ಲಿ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ಶ್ರೀಗಳ ಅಂತ್ಯ ಸಂಸ್ಕಾರದ ವಿಧಿವಿಧಾನಗಳು ನಡೆಯಲಿವೆ. ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು ಈ ವಿಧಿಗಳನ್ನು ನೆರವೇರಿಸಲಿದ್ದಾರೆ.
ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರ ನಿಧನದಿಂದ ಒಕ್ಕಲಿಗ ಸಮುದಾಯ ಸೇರಿದಂತೆ ರಾಜ್ಯದ ಧಾರ್ಮಿಕ ಕ್ಷೇತ್ರದಲ್ಲಿ ಶೂನ್ಯವೊಂದು ಉಂಟಾಗಿದೆ. ಅವರ ಕೊಡುಗೆಗಳು ಶಾಶ್ವತವಾಗಿ ಸ್ಮರಣೀಯವಾಗಿರಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ