
ಬೆಂಗಳೂರು (ಡಿ.25): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕ್ರಿಸ್ಮಸ್ ರಜೆಯ ಸಂಭ್ರಮದಲ್ಲಿದ್ದ ಪ್ರಯಾಣಿಕರ ಬದುಕು ಈ ರೀತಿ ದುರಂತದಲ್ಲಿ ಅಂತ್ಯವಾಗಿರುವುದು ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.
ದುರಂತದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, "ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50,000 ಪರಿಹಾರ ನೀಡಲಾಗುವುದು," ಎಂದು ತಿಳಿಸಿದ್ದಾರೆ. ಗಾಯಾಳುಗಳಿಗೆ ಉಚಿತ ಮತ್ತು ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದವರ ಪಯಣ ಈ ರೀತಿ ಸಾವಿನೊಂದಿಗೆ ಕೊನೆಗೊಂಡಿರುವುದು ಅತ್ಯಂತ ವಿಷಾದನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ' ಎಂದು ಸಿಎಂ ಭಾವುಕವಾಗಿ ನುಡಿದಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. 'ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಹೆದ್ದಾರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಅವರು ಭರವಸೆ ನೀಡಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೃತರ ಗುರುತು ಪತ್ತೆ ಹಚ್ಚಲು ಡಿಎನ್‌ಎ ಪರೀಕ್ಷೆಯ ಮೊರೆ ಹೋಗಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ