ಬಜೆಟ್‌ ಅನುಷ್ಠಾನ ವಿಳಂಬ: ಅಧಿಕಾರಿಗಳ ವಿರುದ್ಧ ಸಿಎಂ ಗರಂ

By Kannadaprabha NewsFirst Published Sep 1, 2021, 8:43 AM IST
Highlights

*   ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ 
*  ಬದಲಾವಣೆ ತರುವಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾದುದು
*  ಆಡಳಿತದಲ್ಲಿ ಬದಲಾವಣೆ ಬಂದರೆ ಜನರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯ

ಬೆಂಗಳೂರು(ಸೆ.01): ಬಜೆಟ್‌ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 

ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ. ಇದನ್ನು ಸಹಿಸುವುದಿಲ್ಲ ಎಂದು ಬಿಸಿ ಮುಟ್ಟಿಸಿದ್ದಾರೆ. 

ಸಾಮಾನ್ಯವಾಗಿ ಕೆಡಿಪಿ ಸಭೆಯು ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆಯುತ್ತಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಕೆಲಸ ವಿಚಾರದಲ್ಲಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನೀವು ಮಾಡುವ ಕೆಲಸದಿಂದ ಸರ್ಕಾರಕ್ಕೆ ಕೆಟ್ಟಹೆಸರು. ಕೆಲಸ ಮಾಡುವ ಇಚ್ಛಾಶಕ್ತಿ ಇರಬೇಕು. ಸರ್ಕಾರಕ್ಕೆ ಕೆಟ್ಟಹೆಸರು ಬರಲು ನಾನು ಬಿಡುವುದಿಲ್ಲ. ನಾನು ಮೃದುವಾಗಿದ್ದೇನೆ ಎಂದು ಭಾವಿಸಬಾರದು ಎಂದರು.
ಎಲ್ಲದಕ್ಕೂ ಶಿಸ್ತು ಕ್ರಮ ಜರುಗಿಸುವುದೇ ಪರಿಹಾರ ಕ್ರಮವಲ್ಲ. ಇನ್ನು ಮುಂದೆ ಇದಕ್ಕೆಲ್ಲಾ ನಾನು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್‌ ಹೇಳಿದ್ದಿಷ್ಟು

ಹಳ್ಳಿಗಳಿಗೆ ಭೇಟಿ ನೀಡಬೇಕು:

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರದ ಕಾರ್ಯದರ್ಶಿಗಳು ಜಿಲ್ಲೆ, ತಾಲೂಕು ಮತ್ತು ಹಳ್ಳಿಗಳಿಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ. ತಮ್ಮ ಇಲಾಖೆಯ ಕಾರ್ಯಕ್ರಮ ಅನುಷ್ಠಾನವನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ತೊಡಕುಗಳಿದ್ದಲ್ಲಿ ಸ್ಥಳದಲ್ಲಿಯೇ ಬಗೆಹರಿಸಬೇಕು. ಆಗ ಜನರ ಬಳಿಗೆ ಸರ್ಕಾರ ಹೋದಂತಾಗುತ್ತದೆ. ಜನ ಇದ್ದಲ್ಲಿ ಅಭಿವೃದ್ಧಿಯಾಗಲು ಸಾಧ್ಯ. ಹಿರಿಯ ಅಧಿಕಾರಿಗಳ ಈ ಕ್ರಮದಿಂದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತವೆ. ಜನರು ಅಭಿವೃದ್ಧಿ ಸುತ್ತ ಸುತ್ತುವುದಲ್ಲ, ಬದಲಿಗೆ ಅಭಿವೃದ್ಧಿ ಜನರಿದ್ದ ಕಡೆಯಾಗಬೇಕು. ಅದ್ದರಿಂದ ಇಲಾಖೆಯ ಮುಖ್ಯಸ್ಥರು ಜಿಲ್ಲಾ, ತಾಲೂಕು ಮತ್ತು ಹಳ್ಳಿಗಳಿಗೆ ಭೇಟಿ ನೀಡಬೇಕು ಎಂದು ಹೇಳಿದರು.

ಆಡಳಿತದಲ್ಲಿ ಪಾರದರ್ಶಕತೆ ಇರಬೇಕು. ಇಲಾಖೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಿಸಿ ಕಡತ ವಿಲೇವಾರಿಯನ್ನು ವಿಳಂಬ ಮಾಡಬಾರದು. ಜನಸಾಮಾನ್ಯರ ಕೆಲಸದಲ್ಲಿ ವಿಳಂಬವಾಗಬಾರದು. ಅವರು ಕಚೇರಿಗಳಿಗೆ ಭೇಟಿ ನೀಡಿದಾಗ ಗೌರವ, ಸೌಜನ್ಯದಿಂದ ನಡೆಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಈ ಜಡತ್ವ ಒಂದೇ ದಿನದಲ್ಲಿ ಬದಲಾಗಲು ಸಾಧ್ಯವಿಲ್ಲ. ಆದರೆ, ಈ ಬದಲಾವಣೆ ತರುವಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾದುದು. ಆಡಳಿತದಲ್ಲಿ ಬದಲಾವಣೆ ಬಂದರೆ ಜನರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯ. ಸಕಾರಾತ್ಮಕ ಚಿಂತನೆಯೊಂದಿಗೆ ಕೆಲಸ ಮಾಡಬೇಕು ಎಂದರು.
 

click me!