ಭದ್ರಾ ರಾಷ್ಟ್ರೀಯ ಯೋಜನೆಗೆ ಸಿಎಂ ಬೊಮ್ಮಾಯಿ ಒತ್ತಡ: ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ

By Kannadaprabha NewsFirst Published Jun 18, 2022, 3:00 AM IST
Highlights

*   ಕೇಂದ್ರ ಸಚಿವರಾದ ನಿರ್ಮಲಾ, ಶೆಖಾವತ್‌ ಭೇಟಿ
*  ಇಬ್ಬರಿಂದಲೂ ಸಕಾರಾತ್ಮಕ ಸ್ಪಂದನೆ
*  ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಒತ್ತಡ 
 

ನವದೆಹಲಿ(ಜೂ.18):  ರಾಜ್ಯದ ನೀರಾವರಿ ಯೋಜನೆಗಳ ವಿಚಾರವಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಸರ್ಕಾರದ ಕದ ತಟ್ಟಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ನವದೆಹಲಿಗೆ ತೆರಳಿ ಕೇಂದ್ರ ಸಚಿವರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಒತ್ತಡ ಹೇರಿದ್ದಾರೆ.

ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್‌ ಶೆಖಾವತ್‌ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌ ಉಪಸ್ಥಿತರಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಗಜೇಂದ್ರ ಸಿಂಗ್‌ ಶೆಖಾವತ್‌ ಅವರನ್ನು ಭೇಟಿಯಾಗಿದ್ದೇನೆ. ಈ ವೇಳೆ ಭದ್ರಾ ಮೇಲ್ದಂಡೆಯನ್ನು ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಸಚಿವರಿಗೆ ಮನವಿ ಮಾಡಿದ್ದೇನೆ. ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಜಿಎಸ್‌ಟಿ ಸ್ತರ, ದರ ಬದಲಿಗೆ ಒಮ್ಮತವಿಲ್ಲ: ಬೊಮ್ಮಾಯಿ ನೇತೃತ್ವದಲ್ಲಿ ಹಣಕಾಸು ಸಚಿವರ ಸಭೆ ವಿಫಲ

ಗುರುವಾರವಷ್ಟೇ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಗಜೇಂದ್ರ ಸಿಂಗ್‌ ಶೆಖಾವತ್‌ ಅವರನ್ನು ಭೇಟಿ ಮಾಡಿದ್ದ ಗೋವಿಂದ ಕಾರಜೋಳ ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟಿದ್ದರು. ಈ ಬಗ್ಗೆ ಮುಂದಿನ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಬಗ್ಗೆ ಕೇಂದ್ರ ಸಚಿವರು ಭರವಸೆ ನೀಡಿರುವುದಾಗಿ ಕಾರಜೋಳ ತಿಳಿಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ.

ಸಚಿವರಿಗೆ ಮೊರೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಗಜೇಂದ್ರ ಸಿಂಗ್‌ ಶೆಖಾವತ್‌ ಅವರನ್ನು ಭೇಟಿಯಾಗಿದ್ದೇನೆ. ಈ ವೇಳೆ ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಸಚಿವರಿಗೆ ಮನವಿ ಮಾಡಿದ್ದೇನೆ. ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
 

click me!