
ಬೆಂಗಳೂರು (ಮಾ.29): ರಾಜ್ಯದಲ್ಲಿ ಅದರಲ್ಲಿಯೂ ಬೆಂಗಳೂರಿನಲ್ಲಿ ಕೋವಿಡ್-19ರ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಂಜೆ 5 ಗಂಟೆಗೆ ಕೋವಿಡ್ ನಿಯಂತ್ರಣ ಕ್ರಮಗಳಲ್ಲಿ ಪ್ರಮುಖ ಪಾತ್ರ ವಹಿಸುವ ಕಂದಾಯ, ಗೃಹ ಮತ್ತು ಆರೋಗ್ಯ ಮತ್ತು ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದೆ.
ರಾಜ್ಯಕ್ಕೆ ಕೋವಿಡ್ ಎರಡನೇ ಅಲೆ ಪ್ರವೇಶಿಸಿದ ಬಳಿಕ ಮೊದಲ ಬಾರಿಗೆ ಕಂದಾಯ ಮತ್ತು ಗೃಹ ಸಚಿವರ ಜೊತೆ ಮುಖ್ಯಮಂತ್ರಿಗಳು ಸಭೆ ನಡೆಸುತ್ತಿದ್ದು ಕೋವಿಡ್ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
1ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್ .
4 ವಾರದ ಹಿಂದೆ ದಿನನಿತ್ಯ 300ರಷ್ಟಿದ್ದ ಪ್ರಕರಣಗಳು ಇದೀಗ 3 ಸಾವಿರಕ್ಕೆ ಏರಿಕೆ ಆಗಿರುವುದು ಮತ್ತು ಪಕ್ಕದ ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಲಾಕ್‌ಡೌನ್, ಸೀಲ್‌ಡೌನ್, ಶಾಲೆ ಬಂದ್ ಮುಂತಾದ ಕಠಿಣ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಅನೇಕ ನಿಯಮಗಳನ್ನು ರೂಪಿಸಿದ್ದರೂ, ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಿಗದೇ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸುವ ಸಾಧ್ಯತೆಯಿದೆ.
ಹಾಗೆಯೇ ಏ.1 ರಿಂದ ಬೆಂಗಳೂರಿಗೆ ಆಗಮಿಸುವ ಹೊರ ರಾಜ್ಯದ ಪ್ರಯಾಣಿಕರಿಗೆ 72 ಗಂಟೆಯೊಳಗೆ ನಡೆಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ವರದಿಯನ್ನು ಕಡ್ಡಾಯ ಮಾಡಲು ರಾಜ್ಯ ಮುಂದಾಗಿರುವುದು ಮತ್ತು ಕೇರಳ, ಮಹಾರಾಷ್ಟ್ರಗಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಲಿದೆ.
ಬೆಂಗಳೂರಿಗೆ ಹೆಚ್ಚಿನ ಫೋಕಸ್: ದೇಶದಲ್ಲೇ ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರವೂ ಒಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆಲವು ಕಠಿಣ ಕ್ರಮಗಳನ್ನು ಪಾಲಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಚುರುಕು ಮುಟ್ಟಿಸಲು ಮುಖ್ಯಮಂತ್ರಿಗಳು ಸಭೆಯಲ್ಲಿ ಹೆಚ್ಚಿನ ಒತ್ತು ನೀಡಲಿದ್ದಾರೆ. ಲಸಿಕೆ ಅಭಿಯಾನಕ್ಕೆ ಇನ್ನಷ್ಟುವೇಗ ತುಂಬುವಂತೆಯೂ ಮುಖ್ಯಮಂತ್ರಿಗಳು ಸೂಚನೆ ನೀಡುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ