
ಬೆಂಗಳೂರು (ನ.17): ಗ್ರಾಮೀಣಾಭಿವೃದ್ಧಿ, ಗ್ರಾಮೀಣ ರಸ್ತೆಗೆ ಸಂಬಂಧಿಸಿದ 16 ಸಾವಿರ ಕೋಟಿ ರು. ಮೊತ್ತದ ಎರಡು ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬುಧವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 10 ಸಾವಿರ ಕೋಟಿ ರು. ವೆಚ್ಚದಲ್ಲಿ ಗ್ರಾಮೀಣ ರಸ್ತೆ ಸಂಪರ್ಕ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 6 ಸಾವಿರ ಕೋಟಿ ರು. ವೆಚ್ಚದಲ್ಲಿ ಗ್ರಾಮಗಳ ಆಂತರಿಕ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಹೇಳಿದರು.
ಅಸ್ತಿತ್ವದಲ್ಲಿರುವ ಹಾಗೂ ಹಾಳಾಗಿರುವ ಡಾಂಬರು ರಸ್ತೆಗಳನ್ನು ಗುರುತಿಸಿ, ಅವುಗಳನ್ನು ಅಭಿವೃದ್ಧಿ ಮಾಡಲು 7 ಸಾವಿರ ಕೋಟಿ ರು. ನೀಡಲಾಗಿದೆ. ಹಾಲಿ ಪ್ರಮುಖ ಗ್ರಾಮೀಣ ರಸ್ತೆಗಳಿಗೆ ಮತ್ತೊಂದು ಪದರ ಡಾಂಬರು ಹಾಕಲು 3 ಸಾವಿರ ಕೋಟಿ ರು. ಒದಗಿಸಲಾಗುವುದು ಎಂದರು.
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವ ರಸ್ತೆಗಳನ್ನು 3 ವರ್ಷಗಳ ವಾರ್ಷಿಕ ನಿರ್ವಹಣೆ ಮಾಡಬೇಕಾಗುತ್ತದೆ. ಕಾಮಗಾರಿಯಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಪ್ರತಿ ಕಾಮಗಾರಿಯ ಆರಂಭದಲ್ಲಿ ಹಾಗೂ ಪೂರ್ಣಗೊಂಡ ನಂತರ ಜಿಪಿಎಸ್ ಆಧಾರಿತ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಗಿದ್ದು, ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ರಾಜ್ಯದ ಗ್ರಾಪಂಗಳ ಪರಿಮಿತಿಯ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳನ್ನು 6 ಸಾವಿರ ರು. ವೆಚ್ಚದಲ್ಲಿ ನಿರ್ಮಿತಿ ಕೇಂದ್ರ, ಕೆಆರ್‌ಐಡಿಎಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗುವುದು. ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳನ್ನು ಬೇರೆ ಯಾವುದೇ ಯೋಜನೆಯಡಿ ಕೈಗೆತ್ತಿಕೊಳ್ಳದಿರುವ ಬಗ್ಗೆ ಕಾರ್ಯಪಾಲಕ ಅಭಿಯಂತರರು ಡಿಪಿಆರ್‌ನಲ್ಲಿ ಕಡ್ಡಾಯವಾಗಿ ದೃಢೀಕರಿಸಬೇಕು. ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಎನ್‌ಜಿಎಸ್‌ಕೆ ತಂತ್ರಾಂಶದಲ್ಲಿ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ