
ಬೆಳಗಾವಿ[ಡಿ.20]: ಬಡವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ, ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಮಾನವೀಯ ಮೌಲ್ಯಗಳೊಂದಿಗೆ ಮೈತ್ರಿ ಸರ್ಕಾರ ನಡೆಯುತ್ತಿದ್ದು, ಸರ್ಕಾರ ಜೀವಂತವಾಗಿದೆಯೇ ಹೊರತು ಸತ್ತಿಲ್ಲ ಎಂದು ಪ್ರತಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬುಧವಾರ ಬರದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರತಿಪಕ್ಷದ ಸದಸ್ಯರ ಆರೋಪಗಳಿಗೆ ಸ್ಪಷ್ಟನೆ ನೀಡುತ್ತಾ ತಿರುಗೇಟು ನೀಡಿದರು. ಸಹಾಯ ಕೇಳಿ ಬರುವ ಯಾವೊಬ್ಬ ವ್ಯಕ್ತಿಯೂ ಬರಿಗೈಯಲ್ಲಿ ಹಿಂತಿರುಗಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುತ್ತಿದೆ. ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರವು ಜೀವಂತವಾಗಿದೆ. ಪ್ರತಿಪಕ್ಷಗಳ ಆರೋಪದಂತೆ ಸತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬರ ನಿರ್ವಹಣೆ ಕುರಿತು ಎಲ್ಲಾ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಪ್ರತಿ ವಿವರದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಉದ್ಬವವಾಗದಂತೆ ಕ್ರಮ ಕೈಗೊಳ್ಳಲು ಸ್ಪಷ್ಟಸೂಚನೆ ನೀಡಲಾಗಿದೆ. ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಗೆ ಒಂದು ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರ ಪೈಕಿ ಕೆಲವರನ್ನು ಹೊರತುಪಡಿಸಿದರೆ ಇನ್ನುಳಿದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಖುದ್ದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜತೆ ಬರ ಪರಿಸ್ಥಿತಿ ನಿಭಾಯಿಸಲು ಒಗ್ಗೂಡಿ ಕಾರ್ಯನಿರ್ವಹಿಸಲಾಗುತ್ತಿದೆ. ಪ್ರತಿಪಕ್ಷದ ಸದಸ್ಯರು ಬರ ಮತ್ತು ಸಾಲಮನ್ನಾ ಕುರಿತು ಮಾಡಿರುವ ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಎಲ್ಲಾ ದೃಷ್ಟಿಯಿಂದಲೂ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ರೈತರ ಸಾಲಮನ್ನಾ ಯೋಜನೆಯ ಬಗ್ಗೆ ಯಾವುದೇ ಅಪನಂಬಿಕೆ ಬೇಕಾಗಿಲ್ಲ. ಸಾಲಮನ್ನಾ ವಿಚಾರದಲ್ಲಿ ಈಗಾಗಲೇ ನಿರ್ದಿಷ್ಟಆದೇಶಗಳನ್ನು ಹೊರಡಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರ ಸಾಲದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಸಾಲಮನ್ನಾ ಕಾರ್ಯವು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು.
ಸಾಲಮನ್ನಾ ಯೋಜನೆಯು ಮಧ್ಯವರ್ತಿಗಳಿಗೆ ಉಪಯೋಗವಾಗಬಾರದು ಎಂಬ ಕಾರಣಕ್ಕಾಗಿ ರೈತರಿಂದ ಅರ್ಜಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪಹಣಿ, ಆಧಾರ್ ಮತ್ತು ರೇಷನ್‌ಕಾರ್ಡ್‌ನ ಪ್ರತಿಗಳನ್ನು ಮಾತ್ರ ಪಡೆದುಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಸೇರಿದಂತೆ ವಿವಿಧ ರಾಜ್ಯಗಳು ರಾಜ್ಯದ ಸಾಲಮನ್ನಾ ಯೋಜನೆಯ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದು, ಈ ವಿಚಾರದಲ್ಲಿ ಮಾದರಿ ರಾಜ್ಯ ಎನ್ನಿಸಿಕೊಳ್ಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ