
ಬೆಂಗಳೂರು(ಜ.12): ರಾಮಮಂದಿರ ಉದ್ಘಾಟನೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಸಚಿವರು ಮತ್ತು ನಾಯಕರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯು ರಾಮಚಂದ್ರನನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
‘ಅಯೋಧ್ಯೆಯಲ್ಲಿ ಜ.22 ರಂದು ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವಾಗಿ ಮಾಡಿರುವುದರಿಂದ ಸದರಿ ಸಮಾರಂಭದಲ್ಲಿ ಭಾಗವಹಿಸದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ತೀರ್ಮಾನ ಸರಿಯಾಗಿದ್ದು, ಇದಕ್ಕೆ ನನ್ನ ಬೆಂಬಲವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಈಶ್ವರ್ ಖಂಡ್ರೆ ಹಾಗೂ ಮಾಜಿ ಸಚಿವ ಆಂಜನೇಯ ಕೂಡ ಇದಕ್ಕೆ ದನಿಗೂಡಿಸಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಕಾಂಗ್ರೆಸ್ ಯತ್ನ: ಪ್ರಲ್ಹಾದ್ ಜೋಶಿ ಲೇವಡಿ
ನಾವೂ ರಾಮಭಕ್ತರೇ- ಸಿದ್ದು:
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಾಗೂ ಪತ್ರಿಕೆ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವ್ಯಾರೂ ಶ್ರೀ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀ ರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀ ರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ. ನಾವೆಲ್ಲರೂ ಶ್ರೀ ರಾಮಚಂದ್ರನ ಭಕ್ತರೇ. ಬಿಜೆಪಿ ಮಾತ್ರ ರಾಜಕೀಯವಾಗಿ ರಾಮನನ್ನು ಬಳಸಿಕೊಳ್ಳುತ್ತಿದೆ ಮತ್ತು ಮಾತನಾಡುತ್ತಿದೆ. ಅದಕ್ಕೆ ಯಾವುದೇ ಔಷಧಿ ಇಲ್ಲ ಎಂದರು.
ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರುವ ಕಾಂಗ್ರೆಸ್ ಪಕ್ಷದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದಕ್ಕೆ ಮಾತ್ರ ನಾವು ವಿರೋಧವಾಗಿದ್ದೇವೆ. ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ವಿಚಾರದಲ್ಲಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದು ಸ್ಪಷ್ಟಪಡಿಸಿದರು.
ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯದ ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದ ವಿಶೇಷ ಪೂಜೆ ಮಾಡುವಂತೆ ನಾನು ಸೂಚಿಸಿಲ್ಲ. ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ? ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ? ನಮ್ಮಲ್ಲಿರುವ ಶ್ರೀ ರಾಮನಿಗೆ ಬೆಲೆ ಇಲ್ಲವೇ? ಹೀಗಾಗಿ ಇಲ್ಲಿನ ದೇವಸ್ಥಾನಗಳಲ್ಲೂ ಪೂಜೆ ನಡೆಯಲಿದೆ ಎಂದು ಹೇಳಿದರು.
ಅಕ್ಕಿ ಕೊಡದವರಿಂದ ಅಕ್ಷತೆ:
ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿ, ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಜಾರಿಗೊಳಿಸಲಾದ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಹಣ ನೀಡಿ ಕೊಂಡುಕೊಳ್ಳುತ್ತೇವೆ ಎಂದಾಗಲೂ ಕೇಂದ್ರ ಅಕ್ಕಿ ನೀಡಲಿಲ್ಲ. ಆದರೆ, ಈಗ ಧರ್ಮದ ಹೆಸರಿನಲ್ಲಿ ಅಕ್ಷತೆಯ ಗಂಟನ್ನು ಮನೆಮನೆಗೆ ಕಳುಹಿಸುತ್ತಿರುವುದನ್ನು ನೋಡಿದರೆ ಬಿಜೆಪಿಯವರಿಗೆ ಧರ್ಮದ ನೈಜ ಜವಾಬ್ದಾರಿಯ ಬಗ್ಗೆ ತಿಳುವಳಿಕೆ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದರು.
News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!
ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತ ದೊಡ್ಡ ಧರ್ಮ ಈ ಜಗತ್ತಿನಲ್ಲಿ ಯಾವುದೂ ಇಲ್ಲ. ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಬಿಜೆಪಿಗರು ಧರ್ಮದ ಕುರಿತಂತೆ ಮಾತನಾಡುತ್ತಿರುವುದನ್ನು ನೋಡಿ ನಗಬೇಕೋ, ಅಳಬೇಕೋ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ, ಬಿಜೆಪಿಯವರು ಶ್ರೀ ರಾಮನನ್ನು ಮತ್ತು ರಾಮಮಂದಿರವನ್ನು ಕೊಂಡುಕೊಂಡಂತಾಡುತ್ತಿದ್ದಾರೆ. ಶ್ರೀ ರಾಮಮಂದಿರ ಉದ್ಘಾಟನೆಯನ್ನು ಪಕ್ಷಾತೀತ, ಧರ್ಮಾತೀತವಾಗಿ ಮಾಡಬೇಕಿತ್ತು. ಆದರೆ, ಬಿಜೆಪಿ ಅದಕ್ಕ ರಾಜಕೀಯ ಬಣ್ಣ ಬಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ