ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರು (ಜು.26): ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ರಾಜಕೀಯ ಜನ್ಮ ನೀಡಿದ ರಾಮನಗರವನ್ನು ಜಿಲ್ಲೆಯನ್ನಾಗಿ ಮಾಡಿ ಅಭಿವೃದ್ಧಿ ಮಾಡಿದ್ದಾರೆ. ಆದರೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರದ ಸಚಿವ ಸಂಪುಟದಿಂದ ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲ ಸಚಿವರು, ಶಾಸಕರು ಸೇರಿಕೊಂಡು ಕಳೆದ ಜು.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮನವಿ ಪತ್ರ ಸಲ್ಲಿಕೆ ಮಾಡಿದ್ದರು. ಈ ವೇಳೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಹಾಗೆಯೇ ಉಳಿಸಿಕೊಳ್ಳುವಂತೆಯೂ ಮನವಿ ಮಾಡಿದ್ದರು. ಆದರೆ, ಬೆಂಗಳೂರು ದಕ್ಷಿಣ ಜಿಲ್ಲಾ ಕೇಂದ್ರವನ್ನು ಹಾಗೆಯೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದರು.
ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡೇ ಮಾಡ್ತೇನೆ: ಡಿಸಿಎಂ ಡಿಕೆ ಶಿವಕುಮಾರ್
ಈ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು.
ಯಾವ ಡಿಕ್ಷನರಿ ನೋಡಿದ್ರೂ 'ರಾಮನಗರ'ಕ್ಕಿಂತ ಒಳ್ಳೆ ಪದ ಸಿಗೋದಿಲ್ಲ: ಸಂಸದ ಸಿ ಎನ್ ಮಂಜುನಾಥ್
ಇದಾದ ನಂತರ 2007ರ ಸಾಲಿನಲ್ಲಿ ರಾಮನಗರ ಪಟ್ಟಣವನ್ನು ಕೇಂದ್ರವಾಗಿಟ್ಟುಕೊಂಡು ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಲಾಯಿತು. ಜೊತೆಗೆ ಇದೇ ವೇಳೆ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಈಗ ರಾಮನಗರ ಜಿಲ್ಲಾ ಕೇಂದ್ರಕ್ಕೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಮುಂದಾಗಿದೆ.