ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು; ಬೆಳಗಾವಿ ಸರ್ಕ್ಯೂಟ್ ಹೌಸ್‌ಗೆ ಗಣ್ಯರ ದಂಡು!

Published : Dec 17, 2025, 06:48 PM IST
CM Siddaramaiah

ಸಾರಾಂಶ

ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರು ಸದನಕ್ಕೆ ಗೈರಾಗಿ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದರು. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಜಿ.ಟಿ. ದೇವೇಗೌಡರಂತಹ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡಿದ್ದಾರೆ.

ಬೆಳಗಾವಿ (ಡಿ.17): ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಭರದಿಂದ ಸಾಗುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ. ತೀವ್ರ ಹೊಟ್ಟೆ ನೋವಿನ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಬುಧವಾರ ಮಧ್ಯಾಹ್ನದಿಂದ ಸದನಕ್ಕೆ ಗೈರಾಗಿದ್ದು, ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸದನಕ್ಕೆ ಗೈರು - ವಿಶ್ರಾಂತಿಗೆ ಶರಣು

ಬುಧವಾರ ಮಧ್ಯಾಹ್ನದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಹೋಗದೆ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ಮುಖ್ಯಮಂತ್ರಿಗಳು ಸಂಪೂರ್ಣ ವಿಶ್ರಾಂತಿಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕ್ಯೂಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದ್ದಾರೆ.

ಕುತೂಹಲ ಮೂಡಿಸಿದ ರಾಜಕೀಯ ಗಣ್ಯರ ಭೇಟಿ

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಹರಡುತ್ತಿದ್ದಂತೆ ವಿವಿಧ ಪಕ್ಷಗಳ ನಾಯಕರು ಸರ್ಕ್ಯೂಟ್ ಹೌಸ್‌ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ವಿಶೇಷವಾಗಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಏಕಾಂಗಿಯಾಗಿ ಬಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಭೇಟಿಯ ಬಳಿಕ ಮಾತನಾಡಿದ ಜಾರಕಿಹೊಳಿ, 'ಇದು ಕೇವಲ ಸೌಜನ್ಯದ ಭೇಟಿ. ಸಿಎಂ ಅವರಿಗೆ ಧೈರ್ಯ ಹೇಳುವ ಅವಶ್ಯಕತೆಯಿಲ್ಲ, ಅವರೇ ನಮಗೆ ಧೈರ್ಯ ಹೇಳುವಷ್ಟು ಗಟ್ಟಿಯಾಗಿದ್ದಾರೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ' ಎಂದು ಸ್ಪಷ್ಟಪಡಿಸಿದರು.

ಮತ್ತೊಂದೆಡೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಕೂಡ ಸಿಎಂ ಅವರನ್ನು ಭೇಟಿ ಮಾಡಿದರು. 'ಚಾಮುಂಡೇಶ್ವರಿ ಕ್ಷೇತ್ರದ ಏತ ನೀರಾವರಿ ಯೋಜನೆ ಹಾಗೂ ಗ್ರೇಟರ್ ಮೈಸೂರು ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದ್ದೇನೆ. ಸಿಎಂ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ನಾಳೆ ಅವರು ಸದನಕ್ಕೆ ಬರಲಿದ್ದಾರೆ ಎಂದು ಜಿಟಿಡಿ ತಿಳಿಸಿದರು.

ಸಚಿವ ಬೈರತಿ ಸುರೇಶ್ ಸ್ಪಷ್ಟನೆ: 

ಮುಖ್ಯಮಂತ್ರಿಗಳ ಆಪ್ತ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, 'ಸಿಎಂ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಅವರ ಜೊತೆಗೆ ನಾನು ಊಟ ಮಾಡಿದ್ದೇನೆ, ಅವರು ಚೆನ್ನಾಗಿದ್ದಾರೆ. ನಾಳೆ ಸದನದಲ್ಲಿ ಹಲವು ಪ್ರಮುಖ ವಿಷಯಗಳಿಗೆ ಸಿಎಂ ಉತ್ತರ ನೀಡಬೇಕಿದೆ, ಹೀಗಾಗಿ ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಅವರು ಪರಿಶೀಲಿಸುತ್ತಿದ್ದಾರೆ ಎಂದು ಗೊಂದಲಗಳಿಗೆ ತೆರೆ ಎಳೆದರು. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ಮುಖ್ಯಮಂತ್ರಿಗಳು ಗುರುವಾರ ಬೆಳಿಗ್ಗೆ ಮತ್ತೆ ಸದನಕ್ಕೆ ಹಾಜರಾಗಿ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸುವ ನಿರೀಕ್ಷೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದ ಮಹಿಳೆಯರಿಗೆ ತಪ್ಪಿದ 2 ಗೃಹಲಕ್ಷ್ಮಿ ಹಣ; ಸದನದಲ್ಲಿ ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!
ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ