ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರು (ಜು.09): ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೈನ ಮುನಿ ಹತ್ಯೆಗೆ ಡಿಸಿಎಂ ಡಿಕೆಶಿ ಆಘಾತ: ಚಿಕ್ಕೋಡಿಯ ಜೈನಮುನಿ ಶ್ರೀ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಅಹಿಂಸೆ ಪರಮ ಧರ್ಮ ಎಂದು ಭಾವಿಸಿದ್ದ ಮುನಿಗಳ ಹತ್ಯೆಗೆ ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಜತೆಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಸರಳ, ಸಜ್ಜನಿಕೆ ನಡೆ ನುಡಿಯಿಂದ ಅಪಾರ ಭಕ್ತರನ್ನು ಹೊಂದಿದ್ದ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಅಂತ್ಯ ಆಘಾತ ತಂದಿದೆ. ಶ್ರೀಗಳ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಅನುಯಾಯಿಗಳು, ಭಕ್ತ ವೃಂದಕ್ಕೆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ರಾಹುಲ್ ಕೇಸಲ್ಲಿ ‘ಕೈ’ ಹೋರಾಟ ಕೋರ್ಟ್ ವಿರುದ್ಧವೇ: ಪ್ರಲ್ಹಾದ್ ಜೋಶಿ ಪ್ರಶ್ನೆ
ಜೈನ ಮುನಿಗಳ ಹತ್ಯೆಗೆ ಸಚಿವೆ ಹೆಬ್ಬಾಳಕರ ಖಂಡನೆ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಅಮಾನುಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಹಿಂಸೆಯನ್ನು ಬೋಧಿಸುವ ಜೈನ ಧರ್ಮ ಇಡೀ ಮನುಕುಲಕ್ಕೆ ಆದರ್ಶವಾಗಿದೆ. ಅಂತಹ ಧರ್ಮದ ಮುನಿಗಳನ್ನು ಹತ್ಯೆ ಮಾಡಿರುವುದು ತೀವ್ರ ನೋವನ್ನುಂಟು ಮಾಡಿದೆ. ಅವರ ಸದ್ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಜೊತೆಗೆ, ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವಂತಾಗಬೇಕು ಎಂದಿದ್ದಾರೆ.
ಅಮರನಾಥ ಭೂಕುಸಿತ: 80 ಕನ್ನಡಿಗರು ಅತಂತ್ರ, ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ ರವಾನೆ
ಜೈನ ಮುನಿ ಹತ್ಯೆ ತೀವ್ರ ನೋವು ತಂದಿದೆ: ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ತೀವ್ರ ನೋವು ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರರ ಹತ್ಯೆಯು ಜನತೆಯಲ್ಲಿಯೂ ನೋವು ತರಿಸಿದೆ. ಈ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಜೈನ ಮುನಿಗಳ ಹತ್ಯೆಯಿಂದ ನನಗೂ ಸೇರಿದಂತೆ ಅಪಾರ ಭಕ್ತರಿಗೂ ಆಘಾತವಾಗಿದೆ. ಅವರ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಿಳಿಸಿದ್ದಾರೆ.