ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಿ ನಿಮ್ಮ ತಾಕತ್ತು ತೋರಿಸಿ; ಕೇಂದ್ರ ಸರ್ಕಾರಕ್ಕೆ ಸಿಎಂ ಸವಾಲು!

Published : Feb 11, 2024, 07:34 PM IST
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಗ್ಯಾರಂಟಿ ಯೋಜನೆ ನಿಲ್ಲಿಸಿ ನಿಮ್ಮ ತಾಕತ್ತು ತೋರಿಸಿ; ಕೇಂದ್ರ ಸರ್ಕಾರಕ್ಕೆ ಸಿಎಂ ಸವಾಲು!

ಸಾರಾಂಶ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದ್ದಾರೆ.

ಬೆಂಗಳೂರು (ಫೆ.11): ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ  ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಕತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ ಎಂದು ಹೇಳಿದ್ದಾರೆ.

 

ಶೂದ್ರರು ರಾಮಾಯಣದಂಥ ಮಹಾನ್ ಗ್ರಂಥ ಬರೆಯಬಲ್ಲರು ಎಂದು ತೋರಿಸಿಕೊಟ್ಟವರು ವಾಲ್ಮೀಕಿ ಋಷಿಗಳು: ಸಿದ್ದರಾಮಯ್ಯ

ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನಾನು ಹಾಕುತ್ತಿರುವ ಸವಾಲು ಎಂದು ತಿಳಿಸಿದ್ದಾರೆ.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ಮೋದಿ ಅವರು, ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು, ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ ಎಂದಿದ್ದಾರೆ.

ಪ್ರಧಾನಿ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾದ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು "ಗರೀಬಿ ಹಟಾವೋ" ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದಲ್ಲಿ 40% ಕಮಿಷನ್ ಇದ್ರೆ ಕೆಂಪಣ್ಣ ದಾಖಲೆ ನೀಡಲಿ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ  ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡ್‌ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದೆ. ನಾವು ಕೆ.ಜಿ ಗೆ ರೂ.33 ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕೆ.ಜಿ ಗೆ ರೂ.29ರಂತೆ ಮಾರಾಟ ಮಾಡುತ್ತಿದೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌