
ಬೆಂಗಳೂರು (ಫೆ.13): ಕೇಂದ್ರ ಸರ್ಕಾರದ ನಿರ್ಧಾರವಾದ ಮೆಟ್ರೋ ದರ ಏರಿಕೆಯ ಹೊಣೆಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಮುಖಂಡರದ್ದು ಆತ್ಮವಂಚಕ ನಡವಳಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೆಟ್ರೋ ದರ ಏರಿಕೆ ಬಗ್ಗೆ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ನೇಮಿಸುವ ಸಮಿತಿಯೇ ಪ್ರಯಾಣ ದರ ನಿಗದಿಪಡಿಸುತ್ತದೆ. ಹೀಗಿದ್ದರೂ ಅದರ ಹೊಣೆಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಲು ಸುಳ್ಳುಗಳನ್ನು ರಾಜ್ಯ ನಾಯಕರು ಪೋಣಿಸುತ್ತಿದ್ದಾರೆ ಎಂದೂ ದೂರಿದ್ದಾರೆ.ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಣೆಯ ಮೂಲಕ ವಾಸ್ತವಾಂಶಗಳನ್ನು ಜನತೆಯ ಮುಂದಿಟ್ಟಿದ್ದಾರೆ.
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಜನರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಆದರೆ ರಾಜ್ಯ ಬಿಜೆಪಿ ನಾಯಕರು ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ:, ಮರಣದಂಡನೆ ಸಾಧ್ಯತೆ?
ಬೆಂಗಳೂರು ಮೆಟ್ರೊ ರೈಲು ನಿಗಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಮ ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿ ನಿಗಮದ ಈಗಿನ ಅಧ್ಯಕ್ಷರಾಗಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ದರ ಪರಿಷ್ಕರಿಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.
ದರ ಪರಿಷ್ಕರಣಾ ಸಮಿತಿ ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಆಧರಿಸಿ ವರದಿ ನೀಡಿದೆ. ದೆಹಲಿ ಮೆಟ್ರೋ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣ ದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು (ಬಿಎಂಆರ್‌ಸಿಎಲ್) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.
ದರ ಏರಿಕೆಗೆ ರಾಜ್ಯ ಸರ್ಕಾರ ಕಾರಣ: ಸೂರ್ಯ
ನಮ್ಮ ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರ ಏರಿಕೆಯಿಂದ ಜನರಿಗೆ ಸಮಸ್ಯೆಯಾಗಿದೆ. ಕೇಂದ್ರ ಸರ್ಕಾರ ದರ ಏರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ. ಬರೀ ಮೆಟ್ರೋ ಅಲ್ಲ ನೊಂದಣಿ ಶುಲ್ಕ, ವಾಹನ ನೋಂದಣಿ, ಆಸ್ಪತ್ರೆ ಸೇವಾ ಶುಲ್ಕ, ಕಾಲೇಜು ಫೀಸ್, ಮೆಟ್ರೋ ದರ ಏರಿಸಿ ಎಂದು ಪತ್ರ ಬರೆದಿದ್ದು, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸಮಸ್ಯೆ ಬಗೆಹರಿಸುವಂತೆ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಅವರು ರಾಜ್ಯ ಸರ್ಕಾರ ಇನ್ನೊಮ್ಮೆ ಪತ್ರ ಬರೆದರೆ ಮತ್ತೊಮ್ಮೆ ದರ ಪರಿಷ್ಕರಣೆಗೆ ಸಮಿತಿ ರಚಿಸಲಾಗುವುದೆಂದು ಭರವಸೆ ನೀಡಿದ್ದಾರೆ ಎಂದರು
ಮೆಟ್ರೋ ರೈಲು ಸಾಧನೆ ಕೇಂದ್ರ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ಮುಖಂಡರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದರಿಂದ ಈ ರೀತಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ