
ಬೆಂಗಳೂರು(ಏ.12): ಒಕ್ಕಲಿಗ ಸಮುದಾಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯು ಸಮುದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿರುವ ಕಾರಣ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಬಿಜೆಪಿ ದೂರು ನೀಡಿದೆ.
ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ನಿಯೋಗವು ದೂರು ಸಲ್ಲಿಸಿದ್ದು, ಡಿ.ಕೆ.ಶಿವಕುಮಾರ್ ಹೇಳಿಕೆಯು ಒಕ್ಕಲಿಗ ಸಮುದಾಯ ಮತ್ತು ಆದಿಚುಂಚನಗಿರಿ ಸ್ವಾಮೀಜಿಗಳ ಲಕ್ಷಾಂತರ ಅನುಯಾಯಿಗಳ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಇದು ಮತದಾರರ ನಡುವೆ ಕೋಮು ಭಾವನೆಗೂ ಕಾರಣವಾಗಲಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇಡಿ, ಐಟಿ ನೋಟಿಸ್ ಪಡೆದು ಬೆಸತ್ತಿರೋ ಡಿ.ಕೆ.ಶಿವಕುಮಾರ್ ಮೇಲೆ ಮತ್ತೊಂದು ಎಫ್‌ಐಆರ್ ದಾಖಲಿಸಿದ ಬಿಜೆಪಿ
ಒಕ್ಕಲಿಗರು ಮತ್ತು ಒಕ್ಕಲಿಗ ಸ್ವಾಮೀಜಿ ದಡ್ಡರಲ್ಲ. ಒಕ್ಕಲಿಗ ಮುಖ್ಯಮಂತ್ರಿಯನ್ನು ಕೆಳಗಿಳಿಸುವಲ್ಲಿ ಬಿಜೆಪಿಯ ನಾಯಕರು ಹೇಗೆ ಪಾತ್ರವಹಿಸಿದ್ದರು ಎಂಬುದನ್ನು ಮರೆತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜಕೀಯ ನಾಯಕರನ್ನು ಟೀಕಿಸುವ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ನೀಡಿರುವ ಸಲಹೆಗಳಿಗೆ ವಿರುದ್ಧವಾಗಿ ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಿದ್ದಾರೆ. ಈ ಆರೋಪಗಳು ಸಾಮಾನ್ಯ ಜನರ ಮೇಲೆ ಕೆಟ್ಟ ಪ್ರಭಾವ ಬೀರಲಿದೆ. ಅಲ್ಲದೇ, ಲೋಕಸಭಾ ಚುನಾವಣೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ ಡಿ.ಕೆ.ಶಿವಕುಮಾರ್ ಹೇಳಿಕೆಯು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ.
ಹೆಬ್ಬಾಳ್ಕರ್, ಪ್ರಿಯಾಂಕ್ ವಿರುದ್ಧವೂ ದೂರು ಸಲ್ಲಿಕೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ, ಜೀವ ಬೆದರಿಕೆ ಹಾಕುವ ಕುರಿತು ಮತ್ತೊಂದು ಮನವಿ ಸಲ್ಲಿಸಲಾಗಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ. ಅಲ್ಲದೇ, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಪ್ರಿಯಾಂಕ್ ಖರ್ಗೆ ಅವರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಕೆಪಿಸಿಸಿಯ ಐಟಿ, ಬಿಟಿ ವಿಭಾಗದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಹ ದೂರು ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ