ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

By Kannadaprabha NewsFirst Published Aug 18, 2021, 7:50 AM IST
Highlights
  • ಹಾನಿಗೆ ಒಳಗಾಗಿರುವ ಎಲ್ಲ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಮನವಿ
  • ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

 ಬೆಂಗಳೂರು (ಆ.18):  ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದ ಮನೆ, ಬೆಳೆ, ಜಾನುವಾರು ಕಳೆದುಕೊಂಡು ಹಾನಿಗೆ ಒಳಗಾಗಿರುವ ಎಲ್ಲ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರವಾಹದಿಂದ ಸಾವಿರಾರು ಜನರು ಸಂಕಷ್ಟದಲ್ಲಿದ್ದು, ಅನ್ನ, ಉಡಲು ಬಟ್ಟೆ, ಉಳಿಯಲು ಸೂರು ಇಲ್ಲದಂತಹ ಸ್ಥಿತಿಯಲ್ಲಿದ್ದಾರೆ. ಹಾಗಾಗಿ ತುರ್ತಾಗಿ ಎಲ್ಲರ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು, ಸಂತ್ರಸ್ತರಿಗೆ ಪರಿಹಾರದ ಜೊತೆಗೆ ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ ಇಲ್ಲವೇ ಪುನರ್‌ ನಿರ್ಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಮಾತ್ರ : ಸಿದ್ದರಾಮಯ್ಯ

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಜಾಗ ನೀಡಬೇಕು. ಮನೆ ಕಟ್ಟಿಕೊಡಬೇಕು, ಅಗತ್ಯವಿರುವ ಕಡೆಗೆ ಹಳ್ಳಿಗಳ ಸ್ಥಳಾಂತರದ ಅನಿವಾರ್ಯತೆ ಇದ್ದು, ಈ ಬಗ್ಗೆ ಸರ್ಕಾರ ಗಂಭೀರವಾಗಿ ತುರ್ತು ಕ್ರಮ ಕೈಗೊಳ್ಳಬೇಕು. ಕಾಳಿ ಯೋಜನೆಯ ಕದ್ರಾ ಅಣೆಕಟ್ಟಿನಿಂದ ಪೂರ್ವ ಸೂಚನೆ ಇಲ್ಲದೇ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ವ್ಯಾಪಾರಿ ಮುಂಗಟ್ಟುಗಳು ನಾಶವಾಗಿವೆ. ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣದಿಂದ ಈಗಾಗಲೇ ಸಂಕಷ್ಟದಲ್ಲಿದ್ದ ವ್ಯಾಪಾರಿಗಳು, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲ ಕಚ್ಚಿದೆ. ಹಾಗಾಗಿ ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪರಿಹಾರದ ಮೊತ್ತ ರಾಜ್ಯಕ್ಕೆ ಅಪಮಾನ ಮಾಡಿದಂತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ನ್ಯಾಯ ಸಮ್ಮತವಾದ ಪರಿಹಾರ ಬಿಡುಗಡೆಗೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ತಿಂಗಳು ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ತೊಂದರೆ ಉಂಟಾದ ಬಾಗಲಕೋಟೆ, ಬೆಳಗಾವಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಖುದ್ದಾಗಿ ಸಾವಿರಾರು ಜನರು ಸಂಕಷ್ಟದಲ್ಲಿರುವುದನ್ನು ನೋಡಿದ್ದನ್ನು ಪತ್ರದಲ್ಲಿ ವಿವರಿಸಿರುವ ಸಿದ್ದರಾಮಯ್ಯ, ಕಳೆದ ಮೂರು ವರ್ಷಗಳಿಂದ ಈ ಜಿಲ್ಲೆಗಳು ನೆರೆ ಹಾವಳಿಯಿಂದ ತತ್ತರಿಸುತ್ತಿವೆ. 2019 ಮತ್ತು 2020ರಲ್ಲಿ ಹಾನಿಗೊಳದ ಪ್ರದೇಶದ ಜನರಿಗೆ ಈವರೆಗೆ ಸರಿಯಾಗಿ ಪರಿಹಾರ ದೊರೆತಿಲ್ಲ. ಮನೆ ಕಳೆದುಕೊಂಡವರಿಗೆ ಮನೆ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

click me!