ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರು (ಏ.07): ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠ ಗುರುವಾರ ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದರಿಂದ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಲೋಕಾಯುಕ್ತ ಸಂಸ್ಥೆಯ ತನಿಖೆಯನ್ನು ಶಾಸಕ ಜಮೀರ್ ಅವರು ಎದುರಿಸಬೇಕಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇನಲ್ಲಿ ಎಫ್‌ಐಆರ್ ದಾಖಲಿಸಿತ್ತು. ಇದನ್ನು ರದ್ದುಪಡಿಸುವಂತೆ ಜಮೀರ್ ಹೈಕೋರ್ಟಲ್ಲಿ ಅರ್ಜಿ ಸಲ್ಲಿಸಿದ್ದರು. ಶಾಸಕರು ಆದಾಯ ಮೀರಿ 87 ಕೋಟಿ ರು. ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿತ್ತು. ಇದರಿಂದ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್ ಅಹ್ಮದ್, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದರು.
ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಬಂದಿದ್ದು ಬೊಮ್ಮಸಂದ್ರದಿಂದ: ಮಾಜಿ ಕಾರು ಚಾಲಕನ ಮೇಲೆ ಶಂಕೆ
ಹಾಗೆಯೇ, ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿತ್ತು. ಇದರಿಂದ ಎಸಿಬಿ ದಾಖಲಿಸಿದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ. ಅರ್ಜಿ ವಿಚಾರಣೆ ವೇಳೆ ಜಮೀರ್ ಪರ ವಕೀಲರು, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ.
ವರುಣದಿಂದ ಸೋಮಣ್ಣ ಕಣಕ್ಕಿಳಿಸಲು ಯತ್ನ: ಸಿದ್ದು ವಿರುದ್ಧ ಸ್ಪರ್ಧಿಸುತ್ತೀರಾ ಎಂದು ಕೇಳಿದ ಬಿಜೆಪಿ
ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದ್ದರು. ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನು ಇಲ್ಲ. ಹಾಗಾಗಿ, ಎಸಿಬಿ ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದ್ದು, ತಡೆ ನೀಡಬಾರದು ಎಂದು ಕೋರಿದ್ದರು.