
ಬೆಂಗಳೂರು (ಅ.07): ಮಂಡ್ಯ ಜಿಲ್ಲೆಯಲ್ಲಿ ಅ.10ರ ಶನಿವಾರ ರಾಜ್ಯ ಮಟ್ಟದ ರೈತರ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂದೆಗಳ ವಿರುದ್ಧ ಪಕ್ಷಾತೀತವಾಗಿ ರೈತರಿಂದ ಸಹಿ ಸಂಗ್ರಹಿಸಿ ಮುಂದಿ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಗರದ ಕ್ವೀಸ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಎಐಸಿಸಿ ಆದೇಶದಂತೆ ಈ ಮೊದಲು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ರೈತರ ಸಮ್ಮೇಳನ ಮಾಡಲು ನಿರ್ಧರಿಸಿದ್ದೆವು. ಆದರೆ, ಆ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಗೆ ವರ್ಗಾಯಿಸಿದ್ದೇವೆ. ಅ.10ರ ಶನಿವಾರ ಬೆಳಗ್ಗೆ 11 ಗಂಟೆಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಡಿ.ಕೆ.ಶಿವಕುಮಾರ್ ...
ಕೃಷಿ ಮಸೂದೆ, ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ರೈತರನ್ನು ಬಂಡವಾಳಶಾಹಿಗಳ ನಿಯಂತ್ರಣಕ್ಕೆ ನೀಡಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಸೆ. 25 ರಂದು ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಿದ್ದೆವು. ಆಕ್ಟೊಬರ್ 2ರಂದು ಕಿಸಾನ್ ಮಜ್ದೂರ್ ದಿನ ಆಚರಿಸಿ ತಾಲೂಕು ಮಟ್ಟದಲ್ಲೂ ಹೋರಾಟ ಮಾಡಿದ್ದೆವು. ಇದೀಗ, ರೈತರ ಬೃಹತ್ ಸಮ್ಮೇಳನ ನಡೆಲಾಗುತ್ತಿದೆ. ಇದು ಪಕ್ಷಾತೀತ ಕಾರ್ಯಕ್ರಮ. ಆರು ಜನ ರೈತ ಮುಖಂಡರು ಈ ಸಭೆಯಲ್ಲಿ ಮಾತನಾಡಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಎಲ್ಲ ಪ್ರಮುಖ ನಾಯಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಹಿ ಸಂಗ್ರಹ ಅಭಿಯಾನ:
ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ಆರಂಭಿಸುತ್ತಿದ್ದೇವೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ದೇಶನದಂತೆ 2 ಕೋಟಿ ಸಹಿ ಸಂಗ್ರಹಿಸಿ ಅವರಿಗೆ ಕಳುಹಿಸಿಕೊಡಲಾಗುವುದು. ಅವರು ಅದನ್ನು ರಾಷ್ಟ್ರಪತಿ ಅವರಿಗೆ ಸಲ್ಲಿಸಿ ರೈತ ವಿರೋಧಿ ಕಾಯ್ದೆಗಳ ರದ್ದತಿಗೆ ಮನವಿ ಮಾಡುತ್ತಾರೆ. ಈ ಅಭಿಯಾನದಲ್ಲಿ ಎಲ್ಲ ರೈತರು ಹಾಗೂ ಎಲ್ಲ ವರ್ಗದ ಜನ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಅಕಾಲಿದಳ ಎನ್‌ಡಿಎ ತೊರೆದಿದ್ದೇ ಸಾಕ್ಷಿ
ಕೇಂದ್ರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಬೇಸತ್ತು ಅಕಾಲಿ ದಳದ ಎನ್‌ಡಿಎ ಮೈತ್ರಿ ಕೂಟದಿಂದ ಹೊರಬಂದು ಆ ಪಕ್ಷದ ಸಂಸದೆ ತಮ್ಮ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹೇಗೆ ರೈತರ ವಿರುದ್ಧ ನಿಂತಿದೆ ಎಂಬುದಕ್ಕೆ ಇದೇ ಸಾಕ್ಷಿ. ರೈತರ ಪರವಾಗಿ ಅವರು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಕೇಂದ್ರದ ಸಚಿವರೊಬ್ಬರು ಪ್ರತಿಭಟನೆ ಮಾಡುವವರು ರೈತರೇ ಅಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ರೈತರೇ ಉತ್ತರ ನೀಡಲಿದ್ದಾರೆ ಎಂದರು ಡಿ.ಕೆ. ಶಿವಕುಮಾರ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ