ಕನ್ನಡದ ಬಗ್ಗೆ ವಿವಾದಿತ ಹೇಳಿಕೆ: ಕಮಲ್‌ ಹಾಸನ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು!

Kannadaprabha News   | Kannada Prabha
Published : May 29, 2025, 06:12 AM IST
Kamal Haasan

ಸಾರಾಂಶ

ತಮಿಳಿನಿಂದ ಕನ್ನಡ ಭಾಷೆಯ ಉಗಮವಾಗಿದೆ ಎಂಬ ತಮಿಳು ಸಿನಿಮಾ ನಟ ಕಮಲ್‌ ಹಾಸನ್‌ ಅವರ ಹೇಳಿಕೆ ಕರುನಾಡು ಕೆಂಡಾಮಂಡಲಗೊಂಡಿದೆ.

ಬೆಂಗಳೂರು (ಮೇ.29): ತಮಿಳಿನಿಂದ ಕನ್ನಡ ಭಾಷೆಯ ಉಗಮವಾಗಿದೆ ಎಂಬ ತಮಿಳು ಸಿನಿಮಾ ನಟ ಕಮಲ್‌ ಹಾಸನ್‌ ಅವರ ಹೇಳಿಕೆ ಕರುನಾಡು ಕೆಂಡಾಮಂಡಲಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವರಾದ ಸಂತೋಷ್‌ ಲಾಡ್‌, ಮಧು ಬಂಗಾರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿ ಹಲವು ರಾಜಕಾರಣಿಗಳು, ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಕಮಲ್‌ ಹಾಸನ್‌ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇಂತಹ ಹೇಳಿಕೆ ಕಮಲ್‌ ಹಾಸನ್‌ ನೀಡಬಾರದು ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದರೆ, ಕನ್ನಡ ಭಾಷೆಗೆ ಅಪಮಾನ ಮಾಡಿರುವ ಕಮಲ್‌ ಹಾಸನ್‌ ಕೂಡಲೇ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಕ್ಷಮೆ ಕೇಳದಿದ್ದರೆ ಚಿತ್ರಕ್ಕೆ ನಿಷೇಧ-ತಂಗಡಗಿ: ಸುದ್ದಿಗಾರರ ಜೊತೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ನಾಡಿನ ನೆಲ, ಜಲ, ಭಾಷೆ ಬಗ್ಗೆ ಹಗುರವಾಗಿ ಎಂತಹ ದೊಡ್ಡ ವ್ಯಕ್ತಿಯೇ ಆಗಿದ್ದರೂ ಮಾತನಾಡಿದರೆ ತಪ್ಪು, ಕೂಡಲೇ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ಸಿನಿಮಾಗಳನ್ನು ನಿಷೇಧಿಸುವಂತೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯುತ್ತೇನೆ. ಕಮಲ್‌ ಹಾಸನ್‌ ಅವರು ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಿರಿಯ ಕಲಾವಿದರಾಗಿ ಅವರು ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು.

ಇನ್ನು ಕನ್ನಡ ಭಾಷೆ ಹಾಗೂ ಕನ್ನಡಿಗರ ಭಾವನೆಗೆ ಧಕ್ಕೆ ತರುವ ಮಾತನ್ನು ನಾವು ಎಂದಿಗೂ ಒಪ್ಪುವುದಿಲ್ಲ ಅವರ ಹೇಳಿಕೆ ಖಂಡನೀಯ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಷೆ, ಅಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಅವರು ಏನು ಹೇಳಿಕೆ ಕೊಟ್ಟಿದ್ದಾರೋ. ನಾನು ನೋಡಿಲ್ಲ. ಆದರೆ, ಇಂತಹ ಮಾತನ್ನು ನಾನು ಖಂಡಿಸುತ್ತೇನೆ ಎಂದರು. ಅದೇ ರೀತಿ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬೇರೆಯವರಿಂದ ಕನ್ನಡದ ಬಗ್ಗೆ ಕಲಿಯಬೇಕಿಲ್ಲ. ಕಮಲ್ ಹಾಸನ್ ಯಾವ ನೆಲೆಯಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದಾರೆ ಎಂಬುದನ್ನು ನೋಡಬೇಕಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌, ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎನ್ನುವ ನಿರರ್ಥಕ ಮಾತುಗಳಿಂದ ಕಮಲ್‌ ಹಾಸನ್‌, ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಮಲ್‌ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ: ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ಚಿತ್ರನಟ ಕಮಲ್ ಹಾಸನ್‌ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದರು. ತಮ್ಮ ಹೇಳಿಕೆಗೆ ಅವರು ಭೇಷರತ್‌ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.ಬೆಳಗಾವಿಯಲ್ಲಿ ಐನಾಕ್ಸ್ ಚಿತ್ರಮಂದಿರದ ಎದುರು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಭಾವಚಿತ್ರ ದಹಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಮಲ್‌ ಹಾಸನ್‌ ಅವರು ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿದ್ದು, ಅದನ್ನು ನಾವು ಸಹಿಸುವುದಿಲ್ಲ. ಅವರಿಗೆ ಕನ್ನಡದ ಇತಿಹಾಸ ಗೊತ್ತಿಲ್ಲ. ಮಾತಿನ ಚಪಲಕ್ಕೆ, ಪ್ರಚಾರ ಗಿಟ್ಟಿಸಿಕೊಳ್ಳಲು ಇಂತಹ ಬಾಲಿಶ ಹೇಳಿಕೆ ಕೊಟ್ಟಿದ್ದಾರೆ. ಅವರು ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅವರ ಯಾವುದೇ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಡಾ.ರಾಜಕುಮಾರ್‌ ಅಭಿಮಾನಿಗಳ ಬಳಗದವರು ಪ್ರತಿಭಟನೆ ನಡೆಸಿದರು. ಕಮಲ್‌ ಹಾಸನ್‌ ವಿರುದ್ಧ ಘೋಷಣೆ ಕೂಗಿ, ಕಮಲ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ಸೇನಾಪಡೆಯಿಂದ ಮೈಸೂರಿನ ಹಳೆ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಲಾಯಿತು.ಕರ್ನಾಟಕ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಮಲ್‌ ಹಾಸನ್ ಅವರ ಪ್ರತಿಕೃತಿ ದಹಿಸಿದರು. ಕನ್ನಡಿಗರ ಕ್ಷಮೆಯಾಚನೆಗೆ ಆಗ್ರಹಿಸಿದರು. ಇದೇ ವೇಳೆ, ಕಲಬುರಗಿ, ರಾಮನಗರ, ರಾಯಚೂರು, ಹಾಸನ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.

ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಖಂಡನೀಯ. ಎಲ್ಲರೂ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಆ ರೀತಿಯ ಹೇಳಿಕೆಗಳನ್ನು ಯಾರೂ ಕೊಡಬಾರದು.
-ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಕೂಡಲೇ ಕ್ಷಮೆ ಕೇಳಲಿ

ನಾಡಿನ ನೆಲ, ಜಲ, ಭಾಷೆ ಬಗ್ಗೆ ಹಗುರವಾಗಿ ಎಂತಹ ದೊಡ್ಡ ವ್ಯಕ್ತಿಯೇ ಆಗಿದ್ದರೂ ಮಾತನಾಡಿದರೆ ತಪ್ಪು, ಕೂಡಲೇ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ಸಿನಿಮಾಗಳನ್ನು ನಿಷೇಧಿಸುವಂತೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯುತ್ತೇನೆ.
- ಶಿವರಾಜ ತಂಗಡಗಿ, ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!