167 ಕೋಟಿಯ ಕರೋನಾ ಅಕ್ರಮ ಆರೋಪ: ನ್ಯಾ. ಮೈಕಲ್‌ ಡಿ ಕುನ್ಹಾ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

Kannadaprabha News   | Kannada Prabha
Published : Jan 01, 2026, 06:25 AM IST
Corona Scam

ಸಾರಾಂಶ

ಕೋವಿಡ್ ಅವಧಿಯ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ತನಿಖೆ ನಡೆಸಿದ ನ್ಯಾ. ಮೈಕಲ್‌ ಡಿ ಕುನ್ಹಾ ಆಯೋಗವು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಮತ್ತು ಬೆಂಗಳೂರು ಜಿಲ್ಲೆಗಳ ತನಿಖಾ ಕಡತಗಳನ್ನು ಹಸ್ತಾಂತರಿಸಲಾಗಿದೆ.

ಬೆಂಗಳೂರು: ಕೋವಿಡ್‌ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ಮೈಕಲ್‌ ಡಿ ಕುನ್ಹಾ ಅವರ ಆಯೋಗ ಬುಧವಾರ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಈ ವರದಿಯನ್ನು ಸರ್ಕಾರ ಬಿಡುಗಡೆ ಮಾಡಬಹುದು ಎಂದು ನ್ಯಾ.ಕುನ್ಹಾ ಅವರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ವ್ಯಾಪ್ತಿಯ ಕೋವಿಡ್‌ ತನಿಖೆ ಕುರಿತ 684 ಕಡತ ಹಾಗೂ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ತನಿಖೆಯ 171 ಕಡತಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕುನ್ಹಾ ಹಸ್ತಾಂತರಿಸಿದರು.

ಕೋವಿಡ್ 19 ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಆಗಸ್ಟ್‌ 2023ರಲ್ಲಿ ಹೈಕೋರ್ಟ್ ನಿವೃತ್ತ ನ್ಯಾ.ಜಾನ್ ಮೈಕೆಲ್ ಡಿ. ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ಆಯೋಗವು 2024ರಲ್ಲಿ ಮೊದಲ ಮಧ್ಯಂತರ ವರದಿ, 2025ರ ಏಪ್ರಿಲ್‌ನಲ್ಲಿ 1,808 ಪುಟಗಳ ಎರಡನೇ ಮಧ್ಯಂತರ ವರದಿ ಸಲ್ಲಿಸಿತ್ತು.

ಮೊದಲ ಮಧ್ಯಂತರ ವರದಿ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲು ವಿಶೇಷ ತನಿಖಾ ತಂಡ ರಚಿಸಲು 2024ರ ನವೆಂಬರ್‌ನಲ್ಲಿ ಸಚಿವ ಸಂಪುಟ ತೀರ್ಮಾನಿಸಿತ್ತು. ಬಳಿಕ, ಇದರ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

167 ಕೋಟಿ ರು. ಪ್ರಮಾಣದ ಅಕ್ರಮ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್‌ ನಿರ್ವಹಣೆ ಸಂದರ್ಭದಲ್ಲಿ 167 ಕೋಟಿ ರು. ಪ್ರಮಾಣದ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಹಲವು ಅಧಿಕಾರಿಗಳ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ 2024ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಸರ್ಕಾರ ವರದಿ ಬಿಡುಗಡೆ ಮಾಡಬಹುದು-ಕುನ್ಹಾ:

ಕೋವಿಡ್‌ ವಿಚಾರಣೆ ಕುರಿತ ಅಂತಿಮ ವರದಿ ಸಲ್ಲಿಸಿರುವ ನ್ಯಾ. ಜಾನ್‌ ಮೈಕಲ್‌ ಡಿ ಕುನ್ಹಾ ಅವರು, ಅಂತಿಮ ವಿಚಾರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆಯೋಗವು ವರದಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಮತ್ತು ಪಾರದರ್ಶಕತೆಯ ಅಗತ್ಯ ಗಮನದಲ್ಲಿಟ್ಟುಕೊಂಡು, ಸರ್ಕಾರ ವರದಿಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡಲು ಪರಿಗಣಿಸಬಹುದು ಎಂದು ಸರ್ಕಾರಕ್ಕೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: 167 ಕೋಟಿಯ ಕರೋನಾ ಅಕ್ರಮ ಆರೋಪ - ನ್ಯಾ. ಮೈಕಲ್‌ ಡಿ ಕುನ್ಹಾ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಜೆಡಿಎಸ್