
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹುಲಿಕಲ್ (ಬಾಳೇಬರೆ) ಘಾಟ್‌ನಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತವು ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಘಾಟ್ ರಸ್ತೆಯ ದುರಸ್ತಿ ಮತ್ತು ತಡೆಗೋಡೆ (ಕಾಂಕ್ರೀಟ್ ವಾಲ್) ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಅಕಸ್ಮಿಕವಾಗಿ ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ನಗರ ಮತ್ತು ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್‌ನಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾದ ಕಾರಣದಿಂದ ಮುಂದಿನ ಆದೇಶದವರೆಗೆ ಹುಲಿಕಲ್ ಘಾಟ್ ಮಾರ್ಗವನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಗುರುಲಿಂಗ ಕವಳಿಮಠ ಆದೇಶ ಹೊರಡಿಸಿದ್ದಾರೆ. ಕರಾವಳಿ ಮತ್ತು ಮಧ್ಯ ಕರ್ನಾಟಕವನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಈ ರಸ್ತೆಯ ಬಂದ್‌ನಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ವಾಹನ ಸವಾರರು ತೀರ್ಥಹಳ್ಳಿಯ ಆಗುಂಬೆ ಘಾಟ್ ಹಾಗೂ ಹೊಸನಗರ ತಾಲೂಕಿನ ನಿಟ್ಟೂರು-ನಾಗೋಡಿ ಘಾಟ್ ಮಾರ್ಗಗಳನ್ನು ಪರ್ಯಾಯವಾಗಿ ಬಳಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಈ ದುರ್ಘಟನೆ ಚಂಡಿಕಾಂಬ ದೇವಸ್ಥಾನದ ಮೊದಲ ಹೇರ್‌ಪಿನ್ ತಿರುವಿನ ಬಳಿ ಸಂಭವಿಸಿದೆ. ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲೇ ಈ ಅನಾಹುತ ಸಂಭವಿಸಿದ್ದು, ಕಾಮಗಾರಿಯನ್ನು ಚಂದ್ರಶೇಖರ್ ಎಂಬ ಗುತ್ತಿಗೆದಾರರು ನಿರ್ವಹಿಸುತ್ತಿದ್ದರು. ಪ್ರಾರಂಭಿಕ ರಕ್ಷಣಾ ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಕಾಮಗಾರಿ ಮೇಲ್ವಿಚಾರಕ ರಾಘು (37) ಮತ್ತು ಕಾರ್ಮಿಕ ರಾಜು (30) ಎಂದು ಗುರುತಿಸಲಾಯಿತು. ನಂತರ ತಡರಾತ್ರಿ ವರೆಗೆ ಮುಂದುವರಿದ ಶೋಧ ಕಾರ್ಯಾಚರಣೆಯಲ್ಲಿ ಹಾವೇರಿ ಜಿಲ್ಲೆಯ ಶಬ್ಬೀರ್ (40) ಅವರ ಮೃತದೇಹವನ್ನು ಬೆಳಗಿನ ಜಾವ ಸುಮಾರು 3 ಗಂಟೆಗೆ ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಹೊರತೆಗೆದರು.
ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್ ತಂಡ ಹಾಗೂ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದರು. ಇದೀಗ ಮೂರು ಮೃತದೇಹಗಳನ್ನು ನಗರ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ಮಾಜಿ ಗೃಹ ಸಚಿವ ಹಾಗೂ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸ್ಥಳದ ಸ್ಥಿತಿಗತಿಗಳನ್ನು ಅವಲೋಕಿಸಿ, ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, “ನಡೆಯಬಾರದ ಘಟನೆ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಸರ್ಕಾರ ಮತ್ತು ನಾವು ಆ ಕುಟುಂಬಗಳ ಜೊತೆ ನಿಲ್ಲುತ್ತೇವೆ,” ಎಂದು ಸಂತಾಪ ವ್ಯಕ್ತಪಡಿಸಿದರು.
ಈ ದುರ್ಘಟನೆ ನಿರ್ಮಾಣ ಕಾಮಗಾರಿಗಳ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದೆ. ಸ್ಥಳೀಯ ಆಡಳಿತವು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯವೂ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ