
ಬೆಂಗಳೂರು(ಆ.25): ರಾಜ್ಯದ ಸುಮಾರು 130ಕ್ಕೂ ಹೆಚ್ಚಿನ ತಾಲೂಕುಗಳಲ್ಲಿ ಬರದ ಛಾಯೆ ಇದೆ ಎಂದು ಮಾಹಿತಿ ನೀಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಬರ ಘೋಷಣೆ ಕುರಿತು ಮುಂದಿನ ವಾರ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.79ರಷ್ಟು ಬಿತ್ತನೆಯಾಗಿದೆ. ಮಳೆ ಕೊರತೆಯಿಂದ ಬೆಳೆ ಒಣಗುತ್ತಿದೆ. ಸಚಿವ ಸಂಪುಟ ಉಪಸಮಿತಿಯಲ್ಲಿ ಕೈಗೊಂಡ ತೀರ್ಮಾನದಂತೆ ತೀವ್ರ ಬರಪೀಡಿತ ಪ್ರದೇಶದಲ್ಲಿ ಬೆಳೆ ಪರಿಸ್ಥಿತಿ ಸಮೀಕ್ಷೆ ಮಾಡಲಾಗುತ್ತಿದೆ. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಈ ತಿಂಗಳ ಅಂತ್ಯದೊಳಗೆ ವರದಿ ಪಡೆದು ಮತ್ತೊಮ್ಮೆ ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುವುದು. ಬರ ಘೋಷಣೆಗೆ ಕೇಂದ್ರದ ಮಾರ್ಗಸೂಚಿ ಅನ್ವಯವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಕೋಟೆನಾಡು ಚಿತ್ರದುರ್ಗದಲ್ಲಿ ಕೈಕೊಟ್ಟ ಮಳೆ, ಬರಪೀಡಿತ ಜಿಲ್ಲೆ ಘೋಷಣೆಗೆ ರೈತರ ಆಗ್ರಹ
ಶೇ.25ರಷ್ಟು ಮಳೆ ಕೊರತೆ:
ಜೂ.1ರಿಂದ ಆ.24ರವರೆಗೆ ವಾಡಿಕೆ ಮಳೆ 651 ಮಿ.ಮೀ. ಆಗಬೇಕಿದ್ದು, ವಾಸ್ತವಿಕ ಮಳೆ 487 ಮಿ.ಮೀ. ಆಗಿದೆ. ಶೇ.25ರಷ್ಟುಕೊರತೆಯುಂಟಾಗಿದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದ್ದು, 77,445 ಕ್ವಿಂಟಲ್ ಲಭ್ಯತೆ ಇದೆ. 3.30 ಲಕ್ಷ ಕ್ವಿಂಟಲ್ ವಿತರಣೆ ಮಾಡಲಾಗಿದೆ. 80 ಸಾವಿರ ಕ್ವಿಂಟಲ್ ಆರ್‌ಎಸ್‌ಕೆಗಳಲ್ಲಿ ಪ್ರಸ್ತುತ ಬೀಜ ಲಭ್ಯತೆ ಇದೆ. ಮುಂಗಾರು ಹಂಗಾಮಿನಲ್ಲಿ 25.47 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, ದಾಸ್ತಾನು 33.20 ಲಕ್ಷ ಮೆಟ್ರಿಕ್ ಟನ್ ಲಭ್ಯ ಇದೆ. 19.89 ಲಕ್ಷ ಮೆಟ್ರಿಕ್ ಟನ್ ಮಾರಾಟ ಮಾಡಲಾಗಿದೆ. 13.30 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಉಳಿಕೆಯಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಅಧಿಸೂಚಿತ ಬೆಳೆಗಳು 36 ಇದ್ದು, ಈಗಾಗಲೇ 16.23 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು 15.31 ಲಕ್ಷ ಹೆಕ್ಟೇರ್ ಬೆಳೆ ವಿಮೆ ವ್ಯಾಪ್ತಿಗೆ ಒಳಪಟ್ಟಿದೆ. 2022-23ನೇ ಸಾಲಿನಲ್ಲಿ 12.64 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿ 1114.17 ಕೋಟಿ ರು.ಗಳನ್ನು ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.
ಕೃಷಿ ಭಾಗ್ಯ ಯೋಜನೆಯಡಿ ಹೆಚ್ಚಿನ ಕೃಷಿ ಹೊಂಡಗಳನ್ನು ನಿರ್ಮಿಸಬೇಕಿದೆ. ಕೇಂದ್ರ ಪುರಸ್ಕೃತ ಯೋಜನೆಗಳು ಮತ್ತು ಇತರೆ ಯೋಜನೆಗಳನ್ನು ಸಂಯೋಜಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ನವೋದ್ಯಮ ಯೋಜನೆಯಡಿ 300 ಹಾರ್ವೆಸ್ಟ್ ಹಬ್ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 100 ಹಬ್‌ಗಳನ್ನು ಬೇಗ ಪ್ರಾರಂಭಿಸಿ ರೈತರ ಬಳಕೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಪ್ರತಿ ತಿಂಗಳೂ ರೈತರ ಹೊಲಕ್ಕೆ ಭೇಟಿ, 29ಕ್ಕೆ ಚಿತ್ರದುರ್ಗದಲ್ಲಿ ಶುರು
ಬರ ಪರಿಸ್ಥಿತಿ ಇರುವುದರಿಂದ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಕೇವಲ ಕಚೇರಿಯಲ್ಲಿರದೆ ರೈತರ ಜಮೀನಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿ ಸಲಹೆ, ಸಹಕಾರ ನೀಡುವುದರ ಜತೆಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡುವಂತೆ ಸೂಚಿಸಲಾಗಿದೆ. ನಿಯೋಜಿತ ನೋಡಲ್ ಅಧಿಕಾರಿಗಳು ಆಗಿಂದಾಗ್ಗೆ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ, ಇಲಾಖಾ ಯೋಜನೆಗಳ ಅನುಷ್ಠಾನ ಕುರಿತು ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಕೈಗೊಂಡ ಕೆಲಸದ ಬಗ್ಗೆ ಕಾಲಕಾಲಕ್ಕೆ ತಮಗೆ ವರದಿ ನೀಡುವಂತೆ ನಿರ್ದೇಶಿಸಲಾಗಿದೆ. ನಾನು ಸಹ ಪ್ರತಿ ತಿಂಗಳು ಒಂದು ಜಿಲ್ಲೆಗೆ ಪ್ರವಾಸ ಕೈಗೊಂಡು ರೈತರ ಹೊಲಗಳಿಗೆ ನೇರವಾಗಿ ಭೇಟಿ ನೀಡುತ್ತೇನೆ. ರೈತರು, ರೈತ ಉತ್ಪಾದಕರ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ರೈತ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಾಗುವುದು. ರೈತರ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು ಎಂದು ನಿರ್ಧರಿಸಲಾಗಿದೆ. ಇದೇ ತಿಂಗಳು 29ರಂದು ಚಿತ್ರದುರ್ಗ ಜಿಲ್ಲೆಯಿಂದ ರೈತರ ಸಂವಾದ ಕಾರ್ಯಕ್ರಮವನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯವನ್ನು ಬರಗಾಲ ಪೀಡಿತವೆಂದು ಘೋಷಿಸಲಿ: ಬಿ.ಎನ್.ಬಚ್ಚೇಗೌಡ
113 ತಾಲೂಕಿನಲ್ಲಿ ಜಂಟಿ ಬರ ಸಮೀಕ್ಷೆ 31ರೊಳಗೆ ವರದಿಗೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ 113 ತಾಲೂಕುಗಳಲ್ಲಿ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಜಂಟಿ ಸಮೀಕ್ಷೆ ನಡೆಸಿ ಬೆಳೆ ಪರಿಸ್ಥಿತಿಯ ವಾಸ್ತವ ವರದಿಯನ್ನು ಆ.31ರ ಒಳಗಾಗಿ ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೂಡಲೇ ಬರ ಘೋಷಿಸಿ: ಬಿಎಸ್‌ವೈ, ಬೊಮ್ಮಾಯಿ
ಬೆಂಗಳೂರು/ಹುಬ್ಬಳ್ಳಿ: ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಬಹುತೇಕ ಅಣೆಕಟ್ಟುಗಳು ಒಣಗಿವೆ. ರೈತರು ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕಾಲಹರಣ ಮಾಡದೆ ಕೂಡಲೇ ಬರಪೀಡಿತ ತಾಲೂಕುಗಳ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ