
ಕಲಬುರಗಿ(ಜು.08): ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಬರುವ ಜುಲೈ 15ಕ್ಕೆ ಸಭೆ ನಡೆಯಲಿದೆ. ಅಲ್ಲಿ ಬರಗಾಲ ಘೋಷಣೆ ಮಾಡಬೇಕೆ ಅಥವಾ ಇಲ್ಲ ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು(ಶನಿವಾರ) ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಮೋಡ ಬಿತ್ತನೆ ಸಹ ಸರ್ಕಾರದ ಮುಂದಿಲ್ಲ. ಮಳೆ 10 ದಿನ ತಡವಾಗಿದ್ದು, ಮುಂದಿನ ಮೂರ್ನಾಲ್ಕು ದಿನದಲ್ಲಿ ಮಳೆ ಬರುವ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಕಾದು ನೋಡುತ್ತಿದ್ದೇವೆ ಎಂದರು.
ಜು.15 ಬಳಿಕ ಬರಪೀಡಿದ ಗ್ರಾಮಗಳ ಘೋಷಣೆ: ಸಚಿವ ಕೃಷ್ಣ ಬೈರೇಗೌಡ
ಪ್ರಸ್ತುತ ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಜಿಲ್ಲೆಗಳಿಗೆ ತಲಾ 1 ಕೋಟಿ ರೂ. ಅನುದಾನ ನೀಡಲಾಗಿದೆ. ಇದಲ್ಲದೆ ಹೆಚ್ಚುವರಿ ಅನುದಾನ ಬೇಕಿದಲ್ಲಿ ಸರ್ಕಾರ ನೀಡಲಿದೆ ಎಂದರು.
ಇದೀಗ ಮಳೆಗಾಲ ಇರುವುದರಿಂದ ಕಲಬುರಗಿ ನಗರದಲ್ಲಿ ಮಳೆ ನೀರು, ಚರಂಡಿ ನೀರು ಮನೆಗೆ ನುಗ್ಗದಂತೆ ನಗರದಲ್ಲಿ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಅಪ್ಪನ ಕೆರೆ ಕಾಮಗಾರಿ ತನಿಖೆ, ದ್ವೇಷದ ರಾಜಕಾರಣ ಅಲ್ಲ:
ಕಲಬುರಗಿ ನಗರದ ಅಪ್ಪನ ಕೆರೆ ಸೌಂದರ್ಯೀಕರಣಕ್ಕೆ ಹಿಂದಿನ ಸರ್ಕಾರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪರಿಸರ ಪ್ರಭಾವದ ಮೌಲ್ಯಮಾಪನ ವರದಿ ಪಡೆಯದೇ ಕಾಮಗಾರಿ ಆರಂಭಿಸಿದ್ದು, ಅಲ್ಲಿನ ಪಕ್ಷಿ ಸಂಕುಲಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಇದು ದ್ವೇಷದ ರಾಜಕಾರಣ ಅಲ್ಲ. ಪರಿಸರ ಕಾಳಜಿ ಮತ್ತು ನಮ್ಮ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಸೂಚನೆ ನೀಡಿರುವೆ. ಪರಿಸರ ಪ್ರಭಾವ ಮೌಲ್ಯಮಾಪನ ವರದಿ ಬಂದ ನಂತರ ಕಾಮಗಾರಿ ಮುಂದುವರೆಸುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
2.50 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಕ್ರಮ:
ಚುನಾವಣೆ ಪೂರ್ವ ನಮ್ಮ ಪಕ್ಷ ಪ್ರಾಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಂತ ಹಂತವಾಗಿ ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇನ್ನು ಶಿಕ್ಷಕರ ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ, ನ್ಯಾಯಾಲಯದ ತೀರ್ಪಿನಂತೆ ಕ್ರಮ ವಹಿಸಲಾಗುತ್ತದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ