
ಮೈಸೂರು (ಮಾ.28): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಇಂದು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಹುಸಿ ಬಾಂಬ್ ಸಂದೇಶಗಳನ್ನ ಕಳಿಸಿ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಕೊನೆಗೂ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಪ್ರತಿಷ್ಠಿತ ಬೃಂದಾವನ ಬಡಾವಣೆ ಎರಡನೇ ಹಂತದ 6ನೇ ಕ್ರಾಸ್‌ನಲ್ಲಿರುವ ಮನೆಯೊಂದರ ಮೇಲೆ ದೆಹಲಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದೆ. ಶ್ರೀನಿವಾಸ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಮೈಸೂರಿನಲ್ಲೇ ಕುಳಿತು ನಿಗೂಢವಾಗಿ ಬೆದರಿಕೆ ಇಮೇಲ್‌ಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ.
ಬಂಧಿತ ಆರೋಪಿ ಶ್ರೀನಿವಾಸ್ ಇತ್ತೀಚೆಗೆ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿ ಆತಂಕ ಸೃಷ್ಟಿಸಿದ್ದ. ಹಲವಾರು ಕಚೇರಿಗಳಿಗೆ, ಶಾಲೆಗಳಿಗೆ ಭಯೋತ್ಪಾದಕ ರೀತಿ ಹುಸಿ ಬಾಂಬ್ ಕಳಿಸಿ ಭಯದ ವಾತಾವರಣವನ್ನು ಸೃಷ್ಟಿಸುತ್ತಿದ್ದ ಆರೋಪಿ. ಕೇವಲ ಒಂದೇ ತಿಂಗಳಿನಲ್ಲಿ ಹಲವು ಬಾರಿ ಇಂತಹ ಸಂದೇಶಗಳನ್ನ ಇಮೇಲ್ ಮೂಲಕ ಕಳಿಸಿ ಭದ್ರತಾ ಏಜೆನ್ಸಿಗಳಿಗೆ ತಲೆನೋವಾಗಿದ್ದ.
ದೇಶದ ಭದ್ರತೆಗೆ ಸವಾಲಾಗಿದ್ದ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಕಿಡಿಗೇಡಿಯ ಪತ್ತೆಗೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿತ್ತು. ಸದ್ಯ ಆರೋಪಿಯನ್ನ ಬಂಧಿಸಿದ್ದು, ಕಾರ್ಯಾಚರಣೆಯ ವೇಳೆ ಆರೋಪಿಯ ಮನೆಯಲ್ಲಿದ್ದ ಹಲವು ಸಿಮ್ ಕಾರ್ಡ್‌ಗಳು, ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಗೆ ಮೈಸೂರಿನ ವಿ.ವಿ. ಪುರಂ ಠಾಣೆ ಪೊಲೀಸರು ದೆಹಲಿ ಪೊಲೀಸರಿಗೆ ಸಾಥ್ ನೀಡಿದ್ದಾರೆ. ಸದ್ಯ ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಪೊಲೀಸರು ತಮ್ಮೊಂದಿಗೆ ಕರೆದೊಯ್ಯಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ