
ಧಾರವಾಡ (ಮಾ.24): ಜಿಲ್ಲೆಯ ರಾಮಾಪುರ ಗ್ರಾಮದ ಸಮೀಪದ ನಿರ್ಜನ ಪ್ರದೇಶದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕರ ಪುತ್ರನೊಬ್ಬರು ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೊಲೆ ಎಂದು ಶಂಕಿಸಲಾಗಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ.
ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಮೃತಪಟ್ಟ ದುರ್ದೈವಿ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ಬಳಿಯಿರುವ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟಾರಣ್ಯದಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ರಾಜು ಬೋಳಶೆಟ್ಟಿ ಅವರು ತಮ್ಮದೇ ಆದ ವ್ಯಾಗನರ್ ಕಾರಿನಲ್ಲಿ ಸುಟ್ಟು ಬೂದಿಯಾಗಿದ್ದಾರೆ.
ದುಷ್ಕರ್ಮಿಗಳು ರಾಜು ಬೋಳಶೆಟ್ಟಿ ಅವರನ್ನು ಮೊದಲು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ನಿರ್ಜನ ಪ್ರದೇಶಕ್ಕೆ ತಂದು ಅವರದೇ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಕಾರು ಮತ್ತು ದೇಹ ಎರಡೂ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲಾಗದ ಸ್ಥಿತಿಯಲ್ಲಿವೆ.
ಘಟನಾ ಸ್ಥಳಕ್ಕೆ ಧಾರವಾಡ ಎಸ್‌ಪಿ ಗುಂಜನ್ ಆರ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಂಡ ಹಾಗೂ ಶ್ವಾನದಳ ಕೂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸಿವೆ. ಪ್ರಸ್ತುತ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಂತಕರ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ. ರಾಜಕೀಯ ಹಿನ್ನೆಲೆಯುಳ್ಳ ಕುಟುಂಬದ ವ್ಯಕ್ತಿಯ ಈ ನಿಗೂಢ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ