
ಬೆಂಗಳೂರು (ಮೇ.3): ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಈ ಸಂಬಂಧ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಶನಿವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಈ ಮುಖಾಂತರ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಿದ್ದಾರೆ.
ನಗರದ 82ನೇ ಸಿಸಿಎಚ್(ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ನ್ಯಾಯಾಲಯವು ಕೊಲೆ ಪ್ರಕರಣ ಸಂಬಂಧ ವಿನಯ್ ಕಲುಕರ್ಣಿ ಅವರನ್ನು ದೋಷಿ ಎಂದು ನಿರ್ಧರಿಸಿ ಏ.15ರಂದು ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಪ್ರಕಟವಾದ ದಿನದಿಂದಲೇ ವಿನಯ್ ಕುಲಕರ್ಣಿ ಅವರು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.
ಈ ಶಿಕ್ಷೆಗೆ ನ್ಯಾಯಾಲಯ ತಡೆಯಾಜ್ಞೆ ನೀಡದಿದ್ದಲ್ಲಿ 1951ರ ಜನತಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 8 ಮತ್ತು ಸಂವಿಧಾನದ ಸೆಕ್ಷನ್ 191(1) (ಇ) ಪ್ರಕಾರ ಈ ಅನರ್ಹತೆ ವಿನಯ್ ಕುಲಕರ್ಣಿ ಶಿಕ್ಷೆ ಅನುಭವಿಸಿ ಬಿಡುಗಡೆಯಾದ ಆರು ವರ್ಷಗಳ ಅವಧಿಗೆ ಮುಂದುವರೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ