ಬಿಜೆಪಿಗಿಂತ ಕಾಂಗ್ರೆಸ್ ನಾಯಕರೊಂದಿಗೆ ಹೆಚ್ಚು ಒಡನಾಟ ಮುಂದುವರೆಸಿರುವ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಟ್ಟಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದು ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ವದಂತಿಗೆ ಇನ್ನಷ್ಟು ಪುಷ್ಟಿ ನೀಡಿದೆ.
ಬೆಂಗಳೂರು (ಫೆ.19): ಬಿಜೆಪಿಗಿಂತ ಕಾಂಗ್ರೆಸ್ ನಾಯಕರೊಂದಿಗೆ ಹೆಚ್ಚು ಒಡನಾಟ ಮುಂದುವರೆಸಿರುವ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಟ್ಟಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿದ್ದು ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ವದಂತಿಗೆ ಇನ್ನಷ್ಟು ಪುಷ್ಟಿ ನೀಡಿದೆ.
ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಭಾನುವಾರ ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು. ಡಿಸಿಎಂ ಅವರೊಂದಿಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಒಟ್ಟಿಗೆ ಪ್ರಯಾಣ ಬೆಳೆಸಿದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮದಲ್ಲೂ ಡಿಕೆಶಿ ಅವರೊಂದಿಗೆ ಒಟ್ಟಿಗೆ ಕಾಣಿಸಿಕೊಂಡರು. ಸಮಾರಂಭದಲ್ಲಿ ಸಭಿಕರ ಸಾಲಿನಲ್ಲಿ ಕುಳಿತಿದ್ದ ಸೋಮಶೇಖರ್ ಅವರನ್ನು ಮರೆಯದ ಡಿಕೆಶಿ, ತಮ್ಮ ಭಾಷಣದಲ್ಲಿ ಸೋಮಶೇಖರ್ ಆಗಮನವನ್ನು ಉಲ್ಲೇಖಸಿದರು. ಕಾರ್ಯಕ್ರಮ ಮುಗಿಸಿ ಇಬ್ಬರೂ ಜತೆಯಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ಮಾಹಿತಿ ಲಭ್ಯವಾಗಿದೆ.
ಡಿಕೆ ಸಹೋದರರ ಹಾಡಿ ಹೊಗಳಿದ ಬಿಜೆಪಿ ಶಾಸಕ! ಕಾಂಗ್ರೆಸ್‌ನತ್ತ ಎಸ್‌ಟಿಎಸ್?
ಪದೇ ಪದೇ ಬಿಜೆಪಿ ಜತೆ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಸಖ್ಯ ಬೆಳೆಸಿಕೊಳ್ಳುತ್ತಿರುವ ಸೋಮಶೇಖರ್ ಇತ್ತೀಚೆಗೆ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಗೆ ಬದಲಾಗಿ ಕಾಂಗ್ರೆಸ್‌ನ ಅಭ್ಯರ್ಥಿ ಪುಟ್ಟಣ್ಣ ಅವರ ಪರ ಮತ ಯಾಚಿಸಿದ್ದರು. ಇದೀಗ ಶಿವಕುಮಾರ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಮಾಡಿರುವುದು ಕುತೂಹಲ ಕೆರಳಿಸಿದೆ.