ಸುಳ್ಳು ಸುದ್ದಿ: ಆಜ್‌ತಕ್‌ ವಾಹಿನಿ ವಿರುದ್ಧ ಬಲವಂತದ ಕ್ರಮಕ್ಕೆ ಹೈಕೋರ್ಟ್‌ ‘ತಡೆ’

By Kannadaprabha News  |  First Published Sep 16, 2023, 8:02 AM IST

ಸ್ವಾವಲಂಬಿ ಸಾರಥಿ ಯೋಜನೆ ವಿರುದ್ಧ ವರದಿ ಪ್ರಸಾರ, ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿಗಮದಿಂದ ಕೇಸ್‌, ಸಂಪಾದಕ ಸುಧೀರ್‌ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್‌ ಸೂಚನೆ


ಬೆಂಗಳೂರು(ಸೆ.16):  ರಾಜ್ಯ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಿ ಕೋಮು ಗಲಭೆ ನಡೆಸಲು ಪ್ರಚೋದನೆ ನೀಡಿದ ಆರೋಪ ಸಂಬಂಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಆಜ್‌ತಕ್‌ ವಾಹಿನಿ ಮತ್ತು ಅದರ ಪ್ರಧಾನ ಸಂಪಾದಕ ಸುಧೀರ್‌ ಚೌಧರಿ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ನಗರದ ಶೇಷಾದ್ರಿಪುರಂ ಠಾಣಾ ಪೊಲೀಸರಿಗೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಸುಧೀರ್‌ ಚೌಧರಿ ಮತ್ತು ಆಜ್‌ತಕ್‌ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್ ಈ ಆದೇಶ ಮಾಡಿದ್ದಾರೆ.

Tap to resize

Latest Videos

ನೌಕರ ಮೃತಪಟ್ಟರೆ ಸೋದರಿಗೆ ಅನುಕಂಪ ನೌಕರಿ ಇಲ್ಲ: ಹೈಕೋರ್ಟ್‌

ಪ್ರಕರಣದ ತನಿಖೆಗೆ ತಡೆಯಾಜ್ಜೆ ನೀಡುವುದಿಲ್ಲ. ಸೆ.20ರಂದು ಅರ್ಜಿಯನ್ನು ಇತ್ಯರ್ಥಪಡಿಸಲಾಗುವುದು. ಅಲ್ಲಿಯವರೆಗೆ ಪೊಲೀಸರು ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು. ಎಲ್ಲಾ ವಿಚಾರ ಸಾರ್ವಜನಿಕ ಅಂಗಳದಲ್ಲಿರುವ ಕಾರಣ ಅರ್ಜಿದಾರರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.

ಕಾರ್ಯಕ್ರಮದ ವಿರುದ್ಧ ಕೇಸ್‌:

ಸೆ.11ರಂದು ಆಜ್ ತಕ್‌ನಲ್ಲಿ ಪ್ರಸಾರವಾದ ಸುದ್ದಿಯಲ್ಲಿ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಅವರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಸಾರಥಿ ಯೋಜನೆಯ ಪ್ರಯೋಜನವನ್ನು ಕೇವಲ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಲ್ಲದ ಹಿಂದೂಗಳಿಗೆ ಈ ಯೋಜನೆ ನೀಡುತ್ತಿಲ್ಲ. ಆ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಅಲ್ಪಸಂಖ್ಯಾತರಲ್ಲದ ಬಡ ಹಿಂದೂಗಳಿಗೆ ಅನ್ಯಾಯವಾಗಿರುತ್ತದೆ ಎಂದು ಹೇಳಿದ್ದರು.

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸಿಂಧುಗೊಂಡ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ

ಇದರ ವಿರುದ್ಧ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯಕ ಆಡಳಿತಾಧಿಕಾರಿ ಎಸ್.ಶಿವಕುಮಾರ್ , ಶೇಷಾದ್ರಿಪುರಂ ಠಾಣೆಯಲ್ಲಿ ದೂರು ನೀಡಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಜನರು ಬ್ಯಾಂಕ್ ಮೂಲಕ ಸಾಲ ಪಡೆದು ಟ್ಯಾಕ್ಸಿ/ಗೂಡ್ಸ್ ವಾಹನ/ ಆಟೊರಿಕ್ಷಾ ಖರೀದಿಸಲು ಬಯಸಿದ್ದಲ್ಲಿ ನಿಗಮವು ಸಾರಥಿ ಯೋಜನಯಡಿ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರು. ಸಹಾಯಧನ ನೀಡುತ್ತದೆ. ಈ ಯೋಜನೆಯು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇತರೆ ಜಾತಿಯ ನಿಗಮಗಳಲ್ಲಿ ಅನುಷ್ಠಾನದಲ್ಲಿದೆ. ಆದರೆ, ಚೌಧರಿ ಸುಳ್ಳು ಸುದ್ದಿ ಬಿತ್ತರಿಸಿದ್ದಾರೆ. ಆ ಮೂಲಕ ಹಿಂದೂ ಧರ್ಮ ಮತ್ತು ಇತರ ಧರ್ಮಗಳ ನಡುವೆ ದ್ವೇಷ ಹರಡುವ, ಅಶಾಂತಿಯ ವಾತಾವರಣ ಸೃಷ್ಟಿಸುವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಈ ದೂರು ಆಧರಿಸಿ ಸುಧೀರ್ ಚೌಧರಿ, ಆಜ್ ತಕ್ ಸುದ್ದಿ ವಾಹಿನಿ ಮತ್ತು ವಾಹಿನಿಯ ಸಂಘಟಕರ ವಿರುದ್ಧ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ಮತ್ತು ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

click me!