
ಬೆಂಗಳೂರು : ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳು ಸೇರಿ ರಾಜ್ಯದ 18 ಕಡೆ ದಾಳಿ ನಡೆಸಿದ್ದಾರೆ.
ನಗರದ ಮೂರು ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳು, ಆರೋಪಿಗಳ ಮನೆಗಳು, ಕಚೇರಿಗಳು ಸೇರಿ ರಾಜ್ಯದ 18 ಕಡೆ ಬೆಳಗ್ಗೆ ಆರು ಗಂಟೆಗೆ ದಾಳಿ ಮಾಡಿದ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ. ಕಾಲೇಜುಗಳ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ.
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸೀಟ್ ಬ್ಲಾಕಿಂಗ್ ದಂಧೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಅಧಿಕಾರಿಗಳು ಕಳೆದ ನವೆಂಬರ್‌ನಲ್ಲಿ ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಕೆಇಎ ಹೊರಗುತ್ತಿಗೆ ನೌಕರರು, ಮಧ್ಯವರ್ತಿಗಳು ಸೇರಿ 12 ಮಂದಿಯನ್ನು ಬಂಧಿಸಿದ್ದರು. ತನಿಖೆ ವೇಳೆ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಕೋಟ್ಯಂತರ ರು. ಅಕ್ರಮ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಹ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು, ಅಕ್ರಮದಲ್ಲಿ ಭಾಗಿಯಾದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳು, ಮಧ್ಯವರ್ತಿಗಳು, ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಏನಿದು ವಂಚನೆ?:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಮೂರು ಸುತ್ತಿನ ಕೌನ್ಸೆಲಿಂಗ್‌ನಲ್ಲಿ ಸೀಟು ಪಡೆದಿದ್ದ 2,625 ಅಭ್ಯರ್ಥಿಗಳು ಕಾಲೇಜಿಗೆ ಪ್ರವೇಶ ಪಡೆದಿರಲಿಲ್ಲ. ಈ ಸಂಬಂಧ ಅಭ್ಯರ್ಥಿಗಳಿಗೆ ಕೆಇಎ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರಲ್ಲಿ 2,208 ಮಂದಿ ಶುಲ್ಕ ಪಾವತಿಸಿರಲಿಲ್ಲ. 95 ಮಂದಿ ಶುಲ್ಕ ಪಾವತಿಸಿದ್ದರೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿರಲಿಲ್ಲ. ಈ ಮೂಲಕ ಪ್ರತಿಷ್ಠಿತ ಕಾಲೇಜುಗಳಲ್ಲೇ 30-50 ಸೀಟುಗಳನ್ನು ಬ್ಲಾಕ್ ಮಾಡಲಾಗಿತ್ತು.
ಈ ಸೀಟುಗಳು ಕೊನೆಗೆ ಮ್ಯಾನೇಜ್‌ಮೆಂಟ್ ಕೋಟಾಗೆ ವಾಪಸ್ ಆಗುವುದರಿಂದ ಆ ಕಾಲೇಜುಗಳು ಪ್ರತಿ ಸೀಟನ್ನು ಸುಮಾರು 60 ಲಕ್ಷ ರು.ಗೆ ಮಾರಾಟ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದವು. ಈ ಅಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಕಾಲೇಜುಗಳ ಆಡಳಿತ ಮಂಡಳಿ ನಡುವೆ ಮಧ್ಯವರ್ತಿಗಳು ಕೆಲಸ ಮಾಡಿದ್ದರು.
ಅಂದರೆ, ಅಭ್ಯರ್ಥಿಗಳ ಲಾಗಿನ್ ಪಾಸ್‌ವರ್ಡ್, ಸೀಕ್ರೆಟ್ ಕೀ ಬಳಸಿ ಅಭ್ಯರ್ಥಿ ಪರ ಆಯ್ಕೆ ಮಾಡಿಸಿ ಸೀಟ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ತನಿಖಾ ಅಖಾಡಕ್ಕೆ ಇಳಿದಿದ್ದಾರೆ.
ರಾಜ್ಯದ ಪ್ರತಿಷ್ಠಿತ ಬಿಇ ಕಾಲೇಜುಗಳಿಗೆ ದಾಳಿ- 18 ಕಡೆ ರೇಡ್ । ಮಹತ್ವದ ದಾಖಲೆಗಳು ವಶ
- ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ದಂಧೆ ಬಗ್ಗೆ ಕಳೆದ ನವೆಂಬರ್‌ನಲ್ಲಿ ಪೊಲೀಸರಿಗೆ ಕೆಇಎ ದೂರು
- ಕೆಇಎ ಹೊರಗುತ್ತಿಗೆ ನೌಕರರು ಸೇರಿ 12 ಮಂದಿಯನ್ನು ಬಂಧಿಸಿದ್ದ ಪೊಲೀಸರು. ಚಾರ್ಜ್‌ಶೀಟ್ ಸಲ್ಲಿಕೆ
- ಅಕ್ರಮ ಹಣ ವರ್ಗಾವಣೆಯಾಗಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಇದೀಗ ಇ.ಡಿ. ಅಧಿಕಾರಿಗಳ ಪ್ರವೇಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ