ಆನೆ ವಿಹಾರಧಾಮ ಸ್ಥಾಪನೆ ಮುನ್ನ ಸ್ಥಳೀಯರ ಜತೆ ಸಭೆ: ಸಚಿವ ಈಶ್ವರ್‌ ಖಂಡ್ರೆ

Published : Sep 14, 2025, 08:10 PM IST
Karnataka forest minister Eshwar Khandre

ಸಾರಾಂಶ

ಆನೆ ವಿಹಾರಧಾಮ ಸ್ಥಾಪನೆ ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಅದರ ಸ್ಥಾಪನೆಗೆ ನಿಗದಿ ಮಾಡಲಾಗಿರುವ ಅರಣ್ಯ ಪ್ರದೇಶ ವ್ಯಾಪ್ತಿಯ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರು (ಸೆ.14): ಆನೆ-ಮಾನವ ಸಂಘರ್ಷ ತಡೆಯುವ ಉದ್ದೇಶದಿಂದ ಆನೆ ವಿಹಾರಧಾಮ ಸ್ಥಾಪನೆ ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಅದರ ಸ್ಥಾಪನೆಗೆ ನಿಗದಿ ಮಾಡಲಾಗಿರುವ ಅರಣ್ಯ ಪ್ರದೇಶ ವ್ಯಾಪ್ತಿಯ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ವನ್ಯಜೀವಿ-ಮಾನವ ಸಂಘರ್ಷಕ್ಕೆ ಪರಿಹಾರ ಹಾಗೂ ರೈಲ್ವೆ ಬ್ಯಾರಿಕೇಡ್‌ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಈಶ್ವರ್‌ ಖಂಡ್ರೆ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಈಶ್ವರ್‌ ಖಂಡ್ರೆ, ಆನೆ-ಮಾನವ ಸಂಘರ್ಷ ತಡೆಯಲು ಆನೆ ವಿಹಾರಧಾಮ ಸ್ಥಾಪನೆ ಬಗ್ಗೆ ತಜ್ಞರು ತಿಳಿಸಿದ್ದಾರೆ. ಅದಕ್ಕಾಗಿ ಸದ್ಯ ಚಿಕ್ಕಮಗಳೂರಿನ ಮುತ್ತೋಡಿ ಪ್ರದೇಶ ಗುರುತಿಸಲಾಗಿದ್ದು, ಅದರ ಬದಲು ತಣಿಗೆಬೈಲು ಸೂಕ್ತ ಪ್ರದೇಶವೆಂದು ತಜ್ಞರು ವರದಿ ನೀಡಿದ್ದು, ಆ ಭಾಗದ ಸ್ಥಳೀಯರ ಸಭೆ ಕರೆದು ಚರ್ಚಿಸಲಾಗುವುದು. ಅವರಿಗೆ ಆನೆ ವಿಹಾರಧಾಮದ ಮಹತ್ವ ತಿಳಿಸಿ ಮುಂದಿನ ಕ್ರಮ ಕೈಗೊಳ್ಳಬೇಕಿದೆ ಎಂದರು.

ವೀರಶೈವ ಲಿಂಗಾಯತ ಎಂದು ಬರೆಸಿ

ಇದೇ ತಿಂಗಳ 22ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿ ಸಮುದಾಯದವರು ವೀರಶೈವ ಲಿಂಗಾಯತ ಎಂದು ಬರೆಸಬೇಕು. ಹಿಂದೂ ಎಂದು ಬರೆಸಬಾರದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷರೂ ಆಗಿರುವ ಖಂಡ್ರೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಹಿಂದಿನಿಂದಲೂ ಮಹಾಸಭಾವು ವೀರಶೈವ ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ.

ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂಬುದು ಸಾರ್ವತ್ರಿಕ ಅಭಿಪ್ರಾಯವಾಗಿದೆ ಎಂದು ಸ್ಪಷ್ಟಪಡಿಸಿದರು. ಇನ್ನುಳಿದಂತೆ, ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು, ಉಪ ಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಉಪಜಾತಿ ಹೆಸರು ಬರೆಸಬೇಕು. ಸರ್ಕಾರಕ್ಕೆ ನಾಡಿನ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ನಿಖರ ಮಾಹಿತಿ ದೊರೆತರೆ, ಕಲ್ಯಾಣ ಕಾರ್ಯಕ್ರಮ ರೂಪಿಸಲು ಅನುಕೂಲವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಸಮೀಕ್ಷೆಯಲ್ಲಿ ತಮ್ಮ ಮಾಹಿತಿ ದಾಖಲಾಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.

ಜಾತಿ ಪ್ರಮಾಣ ಪತ್ರಕ್ಕೂ ಸಮೀಕ್ಷೆಗೂ ಸಂಬಂಧವಿಲ್ಲ

ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧವಿಲ್ಲ. ನೈಜ ಜಾತಿ, ಶಾಲಾ ದಾಖಲಾತಿ ಇತ್ಯಾದಿ ಪರಾಮರ್ಶಿಸಿದ ಬಳಿಕವಷ್ಟೇ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ನೈಜ ಜಾತಿಯನ್ನೇ ಸಮೀಕ್ಷೆಯಲ್ಲಿ ಬರೆಸಬೇಕು, ನಮ್ಮ ಸಮುದಾಯದ ನೈಜ ಸಂಖ್ಯೆ ಹೊರಹೊಮ್ಮಲು ಸಹಕರಿಸಬೇಕು ಎಂದು ಸಮಾಜ ಬಾಂಧವರಿಗೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ, ಮಹಾಸಭಾ ಕಾರ್ಯದರ್ಶಿ ರೇಣುಕ ಪ್ರಸನ್ನ, ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ಕಾಶೆಪ್ಪನವರ್ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್