
ಬೆಂಗಳೂರು[ಫೆ.10]: ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವ ರಾಜ್ಯ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಲ್ಲಿ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ಪಠ್ಯಕ್ರಮ ಅಳವಡಿಸುವ ಮೂಲಕ ಪರೋಕ್ಷವಾಗಿ ತನ್ನ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಮುಂದಿನ ನಾಲ್ಕು ವರ್ಷಗಳಲ್ಲಿ ಒಂದು ಸಾವಿರ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಶಾಲೆಗಳಿಗೆ ಕೇಂದ್ರೀಯ ವಿದ್ಯಾಲಯದ ಮಾದರಿಯಲ್ಲಿ ಪ್ರತ್ಯೇಕ ಸಂಘಟನೆ ಹಾಗೂ ಮಾರ್ಗಸೂಚಿಗಳನ್ನು ನಿಗದಿಪಡಿಸುವುದಾಗಿ ತಿಳಿಸಿದ್ದಾರೆ. ಅಂದರೆ ಮುಂದಿನ ದಿನಗಳಲ್ಲಿ ಸಿಬಿಎಸ್‌ಇ, ಐಸಿಎಸ್‌ಇ ಕೇಂದ್ರೀಯ ಪಠ್ಯಕ್ರಮಗಳನ್ನು ಒಳಗೊಂಡ ಪಠ್ಯಕ್ರಮಗಳನ್ನು ಬೋಧಿಸುವ ಚಿಂತನೆ ಸರ್ಕಾರ ಹೊಂದಿದೆ.
ಇದರರ್ಥ ಈ ಕರ್ನಾಟಕ ಪಬ್ಲಿಕ್ ಶಾಲೆಗಳು ಅಂತಿಮವಾಗಿ ಇಂಗ್ಲಿಷ್ ಮಾಧ್ಯಮ ಶಾಲೆಗಳೇ ಆಗಲಿವೆ. ಆಂಗ್ಲ ಮಾಧ್ಯಮ ತರಗತಿಗಳ ಆರಂಭಕ್ಕೆ ಕನ್ನಡದ ಬಹುತೇಕ ಸಾಹಿತಿಗಳು, ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮಾತ್ರವಲ್ಲ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಇಂತಹ ವಿರೋಧವಿರುವ ಕಾರಣದಿಂದಲೇ ಇಂಗ್ಲಿಷ್ ಮಾಧ್ಯಮವನ್ನು ಪರೋಕ್ಷವಾಗಿ ಆರಂಭಿಸಲು ಸರ್ಕಾರ ಮುಂದಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ರಾಜ್ಯ ಸರ್ಕಾರವು 2019-20ನೇ ಸಾಲಿನಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಕಡೆ ಇಂಗ್ಲಿಷ್ ಮಾಧ್ಯಮ ಆರಂಭಿಸುವುದಾಗಿ ಹೇಳಿತ್ತು. ಆದರೆ, ಬಜೆಟ್‌ನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ. ಇದರ ಬದಲಾಗಿ, ಪೂರ್ವ ಪ್ರಾಥಮಿಕ ಶಿಕ್ಷಣದಿಂದ 12ನೇ ತರಗತಿವರೆಗೂ ಒಂದೇ ಸೂರಿನಡಿ ಶಿಕ್ಷಣ ನೀಡುವುದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ಬಜೆಟ್‌ನಲ್ಲಿ ಹೇಳಿದೆ.
ಸದ್ಯಕ್ಕೆ ಈ ಕರ್ನಾಟಕ ಪಬ್ಲಿಕ್ ಶಾಲೆಗಳ ಪಠ್ಯಕ್ರಮ ಯಾವ ರೀತಿ ಇರಲಿದೆ, ಇಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಬೋಧಿಸುತ್ತಾರೋ ಅಥವಾ ರಾಜ್ಯ ಪಠ್ಯಕ್ರಮವೇ ಇರುತ್ತದೆಯೋ ಎಂಬ ಬಗ್ಗೆ ಇಲಾಖೆಯ ಅಧಿಕಾರಿಗಳು ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ. ಆದರೆ, ಈ ಶಾಲೆಗಳಿಗೆ ಕೇಂದ್ರೀಯ ವಿದ್ಯಾಲಯದ ಮಾದರಿಯಲ್ಲಿ ಪ್ರತ್ಯೇಕ ಸಂಘಟನೆ ಹಾಗೂ ಮಾರ್ಗಸೂಚಿಗಳನ್ನು ನಿಗದಿಪಡಿಸುತ್ತೇವೆ ಎಂದು ಹೇಳುತ್ತಾರೆ. ಜತೆಗೆ, ಉತ್ತಮ ಗುಣಮಟ್ಟದ ಪಠ್ಯಕ್ರಮವೂ ಇರುತ್ತದೆ ಎಂದು ಹೇಳುವ ಮೂಲಕ ಇಂಗ್ಲಿಷ್ ಮಾಧ್ಯಮದಲ್ಲೇ ಈ ಶಾಲೆಗಳು ಇರುವ ಸಾಧ್ಯತೆಯತ್ತ ಬೊಟ್ಟು ಮಾಡುತ್ತಾರೆ.
ಸಾವಿರಕ್ಕೆ ಹೆಚ್ಚಿಸುವ ಗುರಿ:
ಸದ್ಯ 275 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳು ರಾಜ್ಯದಲ್ಲಿ ಅನುಷ್ಠಾನದ ಹಂತದಲ್ಲಿದ್ದು, ಇವುಗಳನ್ನೇ ಸಾವಿರಕ್ಕೆ ಹೆಚ್ಚಿಸುವ ಗುರಿ ಹೊಂದಿದೆ. ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ, ಸುಸಜ್ಜಿತ ಬೋಧನಾ ಕೊಠಡಿಗಳನ್ನು ಒಳಗೊಂಡ ಮೂಲ ಸೌಕರ್ಯ ಈ ಶಾಲೆಗಳಲ್ಲಿರುತ್ತದೆ. ಈ ಶಾಲೆಗಳಿಗೆ ವಿಷಯವಾರು ಶಿಕ್ಷಕರನ್ನು ನೀಡುವ ಮೂಲಕ ಪ್ರತಿ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಆದ್ಯತೆ ನೀಡಲಾಗುತ್ತಿದೆ. ಫಲಿತಾಂಶ ಸುಧಾರಣೆಗೆ, ಪಠ್ಯ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಹೀಗಾಗಿ ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ