
ಬೆಂಗಳೂರು (ಜು.23): ಮನೆಗೆಲಸದ ಮಹಿಳೆ ಮೇಲಿನ ಅತ್ಯಾ*ಚಾರ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2ನೇ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ಸೂಚನೆ ಮೇರೆಗೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಅರ್ಜಿ ಸಂಬಂಧ ಮಂಗಳವಾರ ನಡೆದ ವಿಚಾರಣೆಗೆ ಹಾಜರಾದ ಸಿಐಡಿಯ ಎಸ್‌ಐಟಿ ತನಿಖಾಧಿಕಾರಿಗಳ ಪರ ವಿಶೇಷ ಸರ್ಕಾರಿ ಅಭಿಯೋಜಕರು, ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ಕೋರಿದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ಇದಕ್ಕೂ ಮುನ್ನ ಆರೋಪಿ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ವಾದ ಮಂಡಿಸಿ, ಪ್ರಜ್ವಲ್ ಬಂಧನವಾಗಿ 14 ತಿಂಗಳು ಕಳೆದಿದೆ. ಇದೇ ಪ್ರಕರಣದ ಆರೋಪಿ ಎಚ್.ಡಿ.ರೇವಣ್ಣ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ಪ್ರಜ್ವಲ್‌ಗೂ ಜಾಮೀನು ನೀಡುವಂತೆ ಕೋರಿದರು.
ಈ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದವು. ಬಳಿಕ ಪ್ರಜ್ವಲ್ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ