ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

By Kannadaprabha News  |  First Published Jan 19, 2024, 6:43 AM IST

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ 2013ರ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿರುವ ಜಿ.ಮಂಜುನಾಥ್ (ಕೋಲಾರದ ಹಾಲಿ ಕಾಂಗ್ರೆಸ್‌ ಶಾಸಕ) ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. 


ಬೆಂಗಳೂರು (ಜ.19): ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ 2013ರ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿರುವ ಜಿ.ಮಂಜುನಾಥ್ (ಕೋಲಾರದ ಹಾಲಿ ಕಾಂಗ್ರೆಸ್‌ ಶಾಸಕ) ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿಯು 2021ರ ಅ.27ರಂದು ಕೈಗೊಂಡಿದ್ದ ನಿರ್ಣಯ ಪ್ರಶ್ನಿಸಿ ಜಿ.ಮಂಜುನಾಥ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿದೆ.

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಅರ್ಜಿದಾರ ಜಿ.ಮಂಜುನಾಥ್‌ ಕಸಿದುಕೊಂಡಿದ್ದಾರೆ. ಇದು ಸಂವಿಧಾನದ ನಿಯಮಗಳಿಗೆ ಎಸಗಿದ ಮೋಸವಾಗಿದೆ. ಪರಿಶಿಷ್ಟ ಜಾತಿಗಳಿಗೆ ಮಾಡಿರುವ ವಂಚನೆಯಾಗಿದೆ. ಹಾಗಾಗಿ, ಅವರ ವಿರುದ್ಧ ಸರ್ಕಾರ ಕೈಗೊಳ್ಳಬೇಕು. ಆದರೆ, ಯಾವ ಕ್ರಮ ಜರುಗಿಸಬೇಕು ಎಂಬುದು ಸರ್ಕಾರಕ್ಕೆ ಬಿಟ್ಟಿರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Tap to resize

Latest Videos

ಪ್ರಕರಣದ ವಿವರ: ತಾವು ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಪರಿಶಿಷ್ಟ ಜಾತಿಗೆ ಸೇರಿರುವುದನ್ನು ಸಾಬೀತುಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಹೈಕೋರ್ಟ್‌ 2018ರ ಏಪ್ರಿಲ್‌ನಲ್ಲಿ ಅಸಿಂಧುಗೊಳಿಸಿತ್ತು. ಆ ತೀರ್ಪಿನ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. 

ಸಿದ್ದು, ಡಿಕೆಶಿ ಅಂತರಗಂಗೆ ಬೆಟ್ಟದಂತೆ ಯಾರೂ ಕದಲಿಸಲಾರರು: ಶಾಸಕ ಕೊತ್ತೂರು

ಆ ಅರ್ಜಿ ವಜಾಗೊಳಿಸಿದ್ದ ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನೆ ಸಮಿತಿ ಜಿ.ಮಂಜುನಾಥ್‌ ಅವರ ಜಾತಿಯನ್ನು ಪರಿಶೀಲಿಸಬೇಕು. ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು ಎಂದು ಆದೇಶಿಸಿತ್ತು. ಜಿ.ಮಂಜುನಾಥ್ ಅವರು ಬುಡುಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಬುಡುಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರುತ್ತದೆ. ಸಮಿತಿಯ ನಿರ್ಣಯವನ್ನು ಮಂಜುನಾಥ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದೀಗ ಹೈಕೋರ್ಟ್ ಶಾಸಕ ಮಂಜುನಾಥ್‌ ಅರ್ಜಿಯನ್ನು ತಿರಸ್ಕರಿಸಿದ್ದು, ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ಸೂಚಿಸಿದೆ.

click me!