
ಬೆಂಗಳೂರು (ನ.21) : ಕಬ್ಬಿಗೆ ನ್ಯಾಯ ಸಮ್ಮತ ಪ್ರೋತ್ಸಾಹ ದರ(ಎಫ್‌ಆರ್‌ಪಿ) ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ. 22ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಕಬ್ಬಿನ ಎಫ್‌ಆರ್‌ಪಿ ಹೆಚ್ಚಳದ ಬಗ್ಗೆ ತಜ್ಞರ ಸಮಿತಿ ರಚಿಸಿ ವರದಿ ಪಡೆಯುವುದಾಗಿ ಹೇಳಿದ್ದ ಸರ್ಕಾರ ನುಡಿದಂತೆ ನಡೆದಿಲ್ಲ. ರೈತರಿಗೆ ನ್ಯಾಯ ಕೊಡುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಮಾತಿಗೆ ತಪ್ಪಿರುವುದರಿಂದ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಕರ್ನಾಟಕದ 20 ಜಿಲ್ಲೆಗಳಲ್ಲಿ ಇಂದು ರಸ್ತೆಗಿಳಿಯಲಿರುವ ರೈತರು
ಕಬ್ಬು ಬೆಳೆಗಾರರು ಸಮಸ್ಯೆ ಪರಿಹರಿಸುವಂತೆ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಬೂಬು ಹೇಳುತ್ತಾ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ, ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ರಾಜ್ಯದ 30 ಲಕ್ಷ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಗಂಭೀರ ಪ್ರಯತ್ನ ನಡೆಸುತ್ತಿಲ್ಲ. ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬು ಕಟಾವು ಸಾಗಾಣಿಕೆ ವೆಚ್ಚವನ್ನು ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ಕಡಿತಗೊಳಿಸಬೇಕು. ಬ್ಯಾಂಕುಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್ ಪರಿಗಣಿಸಬಾರದು, ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೂ ಧರಣಿ ನಡೆಸುವುದಾಗಿ ಅವರು ವಿವರಿಸಿದ್ದಾರೆ. ಮತ್ತೆ ಸಿಡಿದೆದ್ದ ಜಯ ಮೃತ್ಯುಂಜಯ ಸ್ವಾಮೀಜಿ: ಸಿಎಂ ಬೊಮ್ಮಾಯಿ ನಿವಾಸದ ಮುಂದೆ ಜೂನ್ 27 ರಂದು ಧರಣಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ