
ನೆಲಮಂಗಲ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು (ಡಿಆರ್‌ಐ) ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ 190 ಟನ್ ಯೂರಿಯಾ ಗೊಬ್ಬರವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು 28 ಕೋಟಿ ರು. ಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ಕೇಂದ್ರದಿಂದ ಸಬ್ಸಿಡಿಯಲ್ಲಿ ಸಿಗುವ 45 ಕೆ.ಜಿ. ತೂಕದ ಯೂರಿಯಾ ಗೊಬ್ಬರವೊಂದರ ಚೀಲದ ಬೆಲೆ ಸಾಧಾರಣವಾಗಿ 246 ರು. ಇದೆ. ರೈತರಿಗಾಗಿ ಸಬ್ಸಿಡಿ ದರದಲ್ಲಿ ಕೊಡುವ ಈ ಯೂರಿಯಾವನ್ನು ಸಂಗ್ರಹಿಸಿ, ಅದನ್ನು 2,000 ರಿಂದ 2,500 ಸಾವಿರ ರುಪಾಯಿಗಳಿಗೆ ಮಧ್ಯವರ್ತಿಗಳ ಮೂಲಕ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
6 ತಿಂಗಳ ಹಿಂದೆ ತಜೀರ್ ಖಾನ್ ಯೂಸುಫ್ ಎಂಬುವರು ತಿಂಗಳಿಗೆ 40000 ರು.ಗೆ ಶೆಡ್ ಅನ್ನು ಬಾಡಿಗೆಗೆ ಪಡೆದಿದ್ದರು. ಇಲ್ಲಿಂದ ಯೂರಿಯಾವನ್ನು ಪ್ಯಾಕ್ ಮಾಡಿ ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು. ತಮಿಳುನಾಡಿನಲ್ಲಿ ದಾಳಿ ವೇಳೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಡುವ 45 ಕೆ.ಜಿ. ತೂಕದ ಯೂರಿಯಾವನ್ನು ಶೆಡ್ಗಳಿಗೆ ತಂದು ದಾಸ್ತಾನು ಮಾಡಲಾಗುತ್ತಿತ್ತು. ಬಳಿಕ, ಅದನ್ನು ಬೇರೆ ಚೀಲಗಳಿಗೆ ತುಂಬಿ 50 ಕೆ.ಜಿ. ಚೀಲವನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಗೋಡೌನ್ ಮಾಲೀಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ದಂಧೆಯಲ್ಲಿ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆಯಿದೆ. ಯೂರಿಯಾ ಗೊಬ್ಬರ ಸಿಗದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ಪರದಾಡುತ್ತಿದ್ದು, ರೈತರಿಗೆ ಕೇಂದ್ರ ಸರ್ಕಾರದಿಂದ ಸಬ್ಸಿಡಿಯಲ್ಲಿ ಸಿಗಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ