
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಅಂತಿಮ ಮೀಸಲು ಅಧಿಸೂಚನೆ ಪ್ರಕಟಿಸಿದೆ. ಇದರೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ವಿಳಂಬವಾಗುತ್ತಾ ಬಂದಿದ್ದ ಈ ಎರಡೂ ಸ್ಥಳೀಯ ಸಂಸ್ಥೆಗಳಿಗೆ ಜನವರಿ ವೇಳೆಗೆ ಚುನಾವಣೆ ನಿರೀಕ್ಷಿಸಲಾಗಿದೆ.
ರಾಜ್ಯದ 30 ಜಿಲ್ಲಾ ಪಂಚಾಯತಿಗಳ 1,101 ಸದಸ್ಯ ಸ್ಥಾನಗಳು ಮತ್ತು 234 ತಾಲೂಕು ಪಂಚಾಯತಿಗಳ 3,580 ಸದಸ್ಯ ಸ್ಥಾನಗಳಿಗೆ ಸರ್ಕಾರ ಮೀಸಲು ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಿದೆ. ಪ್ರತಿಯೊಂದು ಜಿಪಂ ಮತ್ತು ತಾಪಂಗಳಿಗೂ ಪ್ರತ್ಯೇಕ ಅಧಿಸೂಚನೆ ಹೊರಬಿದ್ದಿದೆ.
ಈ ಎರಡೂ ಚುನಾವಣೆ ವಿಚಾರದಲ್ಲಿ ಸರ್ಕಾರದ ಕರ್ತವ್ಯ ಮುಗಿದಿದೆ. ಇನ್ನೇನಿದ್ದರೂ ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ವೇಳಾಪಟ್ಟಿ ಘೋಷಿಸಿ ಚುನಾವಣೆ ನಡೆಸಬೇಕಿದೆ. ಬಹುತೇಕ ಜನವರಿ ವೇಳೆಗೆ ಚುನಾವಣೆಗಳು ನಡೆಯುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರ ಈ ಹಿಂದೆ ಪ್ರಕಟಿಸಿದ್ದ ಕರಡು ಮೀಸಲು ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಈ ಅಂತಿಮ ಮೀಸಲು ಪಟ್ಟಿ ಬಿಡುಗಡೆ ಮಾಡಿದೆ. ಜಿಲ್ಲೆ, ತಾಲೂಕು ಪಂಚಾಯಿತಿ ಮೀಸಲಾತಿ ಅಧಿಸೂಚನೆ ಪತ್ರಕ್ಕಾಗಿ ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಜಿ.ಪಂ, ತಾ.ಪಂ. ಚುನಾವಣೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು, 2022ರಲ್ಲಿಯೇ ತಾಪಂ ಮತ್ತು ಜಿಪಂಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಹಾಗೂ ಕೆಲ ಗ್ರಾಪಂ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾಗಿತ್ತು. ಹೀಗಾಗಿ ವಿಳಂಬವಾಯಿತು. ಈಗ ಎಲ್ಲಾ ಜಿ.ಪಂ, ತಾ.ಪಂ.ಗಳ ಒಟ್ಟು 4,681 ಸದಸ್ಯ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ತಿಳಿಸಿದರು.
ಇದರೊಂದಿಗೆ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಸರ್ಕಾರದ ಪಾಲಿನ ಪ್ರಮುಖ ಕರ್ತವ್ಯ ಪೂರ್ಣಗೊಂಡಿದೆ. ಇನ್ನು ಚುನಾವಣಾ ದಿನಾಂಕ, ನೀತಿ ಸಂಹಿತೆ ಹಾಗೂ ವೇಳಾಪಟ್ಟಿಯನ್ನು ನಿಗದಿಪಡಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗ ಮೇಲಿದೆ. ಜನವರಿಯಲ್ಲಿ ಚುನಾವಣೆಗಳು ನಡೆಯುವ ನಿರೀಕ್ಷೆ ಇದೆ. ಆಯೋಗವು ದಿನಾಂಕ ಪ್ರಕಟಿಸಿದ ತಕ್ಷಣವೇ ಚುನಾವಣೆಗಳು ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕವೇ ನಡೆಯಲಿವೆ. ಗ್ರಾಮೀಣ ಭಾಗದ ಈ ಮಹತ್ವದ ಚುನಾವಣೆಯನ್ನು ಎದುರಿಸಲು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸಂಪೂರ್ಣ ಸಿದ್ಧವಾಗಿದೆ ಎಂದು ಸಚಿವರು ಹೇಳಿದರು.
ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ 2022ರಲ್ಲೇ ಮುಕ್ತಾಯಗೊಂಡಿದ್ದರೂ, ಹಲವು ಕಾರಣಗಳಿಂದ ಚುನಾವಣೆ ನಡೆದಿರಲಿಲ್ಲ. ಹಲವು ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಿದ್ದು ಮಾತ್ರವಲ್ಲದೆ, ಕೆಲ ಗ್ರಾಮೀಣ ಪ್ರದೇಶಗಳು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಗೊಂಡಿದ್ದವು. ಇದರಿಂದಾಗಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುವಿಂಗಡಣೆ ಮಾಡುವುದು ಅನಿವಾರ್ಯವಾಗಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲೇ ಚುನಾವಣೆ ನಡೆಯಬೇಕಿತ್ತಾದರೂ, ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ವಿಳಂಬವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ