
ಕಾರವಾರ (ಜ.7): ಕಳೆದ ಎರಡು ವರ್ಷಗಳಿಂದ ತಣ್ಣಗಾಗಿದ್ದ ಮಂಗನ ಕಾಯಿಲೆ (KFD) ಭೀತಿ ಈಗ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಶುರುವಾಗಿದೆ. 2026ರ ಹೊಸ ವರ್ಷದ ಆರಂಭದಲ್ಲೇ ಜಿಲ್ಲೆಯಲ್ಲಿ ಮೊದಲ ಮಂಗನ ಕಾಯಿಲೆ ಪ್ರಕರಣ ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳಗುಂದ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿಂದೆ ಕೆ.ಎಫ್.ಡಿ ಹಾಟ್ ಸ್ಪಾಟ್ ಆಗಿದ್ದ ಸಿದ್ದಾಪುರದಲ್ಲಿಯೇ ಮತ್ತೆ ಪ್ರಕರಣ ಕಾಣಿಸಿಕೊಂಡಿರುವುದು ಆರೋಗ್ಯ ಇಲಾಖೆಯನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ಮುಳಗುಂದ ಗ್ರಾಮದ 80 ವರ್ಷದ ವೃದ್ಧೆಯೊಬ್ಬರಲ್ಲಿ ಮಂಗನ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದವು. ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ KFD ಪಾಸಿಟಿವ್ ಇರುವುದು ದೃಢಪಟ್ಟಿದೆ. ಸದ್ಯ ವೃದ್ಧೆಯನ್ನು ನಿರಂತರ ನಿಗಾದಲ್ಲಿ ಇರಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ವೃದ್ಧೆಯ ಆರೋಗ್ಯ ಸ್ಥಿತಿ ಸ್ಥಿರ
ಮಂಗನ ಕಾಯಿಲೆ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದರೂ, ಸದ್ಯಕ್ಕೆ ಸಮಾಧಾನಕರ ಸಂಗತಿಯೆಂದರೆ ಬಾಧಿತ ವೃದ್ಧೆಯ ಆರೋಗ್ಯ ಸ್ಥಿರವಾಗಿದೆ. ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯಕೀಯ ಮೂಲಗಳು ಖಚಿತಪಡಿಸಿವೆ.
ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿದ್ದವು. ಆದರೆ ಈಗ ವರ್ಷದ ಆರಂಭದಲ್ಲೇ ಕೇಸ್ ಪತ್ತೆಯಾಗಿರುವುದರಿಂದ ಜನರಲ್ಲಿ ಮತ್ತೆ ಭೀತಿ ಎದುರಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ