
ಬೆಂಗಳೂರು(ಜು.06): ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಾದ್ಯಮ ಸಲಹೆಗಾರ ಸದಾನಂದ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಿನ್ನೆ(ಸೋಮವಾರ) ಸುಮಾರು ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಅವರು ವಿಧಿವಶರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಹೃದಯಾಘಾತಗೊಂಡ ಹಿನ್ನಲೆ ಕೂಡಲೇ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ತೆರಳುವಷ್ಟರಲ್ಲಿ ಅವರು ನಿಧನ ಹೊಂದಿದ್ದಾರೆ. ಅವರ ಅಂತ್ಯಕ್ರಿಯೆ ಇಂದು, ಮಂಗಳವಾರ ಹೆಬ್ಬಾಳದಲ್ಲಿ ನಡೆಯಲಿದೆ.
ಇನ್ನು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮಾಧ್ಯಮ ಸಲಹೆಗಾರನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು. ಅವರ ಕುಟುಂಬದ ನೋವು ನನ್ನದೂ ಕೂಡ. ನೀವು ನಿರ್ಗಮಿಸಿದರೂ ‘ಸದಾ’ ನೆನಪಲ್ಲಿರುತ್ತೀರಿ ಎಂದು ಬರೆದಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣರವರು ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ನೇರ ನಿಷ್ಠುರ ಮನೋಭಾವದ ಸದಾನಂದ ಅವರು, ʼಸಂಜೆವಾಣಿʼ, ʼಈ ಸಂಜೆʼ ಹಾಗೂ ʼಕನ್ನಡಪ್ರಭʼ ಪತ್ರಿಕೆಗಳಲ್ಲಿ ಕೆಲಸ ಮಾಡಿ ತಮ್ಮದೇ ಛಾಪು ಮೂಡಿಸಿದ್ದರು. ಬರವಣಿಗೆಯಲ್ಲಿ ತೀಕ್ಷ್ಣತೆ, ಬರೆಯಬೇಕಾದ್ದನ್ನು ನೇರವಾಗಿ ಮುಲಾಜಿಲ್ಲದೆ ಬರೆಯುತ್ತಿದ್ದವರು. ಅವರ ಅಗಲಿಕೆ ಬಹಳ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಬಂಧುಬಳಗ, ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಭಗವಂತ ದಯಪಾಲಿಸಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ