
ಬೆಂಗಳೂರು(ಏ.17): ತಡರಾತ್ರಿ ಹುಬ್ಬಳ್ಳಿಯಲ್ಲಿ(Hubballi) ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಅಂತ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ(HD Kumaraswamy) ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಂದು(ಭಾನುವಾರ) ಟ್ಟಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್ ರಾದ್ಧಾಂತಕ್ಕೆ ಕಾರಣವಾಗಿದೆ. ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ(Police) ಮೇಲೆ ದಾಳಿ, ಠಾಣೆ & ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು ಅಂತ ಹೇಳಿದ್ದಾರೆ.
Hanuman Jayanti: ಯಲಗೂರು ಆಂಜನೇಯ ದರ್ಶನ ಪಡೆದ ಮಾಜಿ ಸಿಎಂ: HDK ಸಾಫ್ಟ್ ಹಿಂದೂತ್ವ ಪ್ರದರ್ಶನ..!
ಕಿಡಿಗೇಡಿ ಯುವಕನ ಬಂಧನವಾಗಿದೆ(Arrest). ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು ಅಂತ ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ನನ್ನ ಅಭಿನಂದನೆ
ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರು ಹಾಗೂ ಇಡೀ ಪೊಲೀಸ್ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಅಂತ ಆಗ್ರಹಿಸಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. 'ಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್ ಮೀಡಿಯಾ(Social Media) ಹಿಂಸೆ ಹರಡುವ ಟೂಲ್ʼಕಿಟ್ ಆಗಿಬಿಟ್ಟಿದೆ.ʼ ಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಅಂತ ಹೇಳಿದ್ದಾರೆ.
ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್(BJP-Congress) ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ 'ಬ್ರಿಟೀಷ್ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ. ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಅಂತ ಬರೆದಿಕೊಂಡಿದ್ದಾರೆ.
ಇಬ್ರಾಹಿಂಗೆ ಅಧಿಕಾರ ಹಸ್ತಾಂತರಿಸಿದ ಕುಮಾರಸ್ವಾಮಿ
ಇನ್ನೂ ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಸಿಎಂ ಇಬ್ರಾಹಿಂ(CM Ibrahim) ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಎಚ್.ಕೆ ಕುಮಾರಸ್ವಾಮಿ ಅಧಿಕಾರ ಹಸ್ತಾಂತರಿಸಿದ್ದಾರೆ. ಪಕ್ಷದ ಧ್ವಜ ನೀಡುವ ಮೂಲಕ ಸಿಎಂ ಇಬ್ರಾಹಿಂ ಅವರನ್ನ ಎಚ್.ಡಿ. ದೇವೇಗೌಡರು(HD Devegowda) ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಇದೇ ವೇಳೆ ಮಾತನಾಡಿದ ಎಚ್.ಕೆ. ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಅಂಥವರು ನಮ್ಮ ಪಕ್ಷಕ್ಕೆ ಬರಬೇಕು. ನಾನು ಸ್ವಾಗತಿಸ್ತೇನೆ. ಪಕ್ಷ ನಮ್ಮದು ಆದ್ರೆ ಅಧಿಕಾರ ನಮ್ಮದಲ್ಲ, ಇದನ್ನ ಪ್ರತಿಯೊಬ್ಬ ಕಾರ್ಯಕರ್ತರನು ಅರ್ಥ ಮಾಡಿಕೊಳ್ಳಬೇಕು. ನಾನು ಭಾವುಕನಾಗಿ ಮಾತಾಡ್ತಿದ್ದೇನೆ. ಕೃತಜ್ಞತೆ ಇದ್ದವರು ಮಾತ್ರ ಈ ರೀತಿ ಭಾವುಕರಾಗಿ ಮಾತನಾಡಲು ಸಾಧ್ಯ. ನಾನು ಕೋರ್ಟ್‌ನಲ್ಲಿ ಕೆಲಸ ಮಾಡ್ತಿದ್ದಾಗ ದೇವೇಗೌಡರು ನನಗೆ ಬಿ ಫಾರಂ ಕೊಟ್ಟಿದ್ರು. ಈ ಪಕ್ಷಕ್ಕೆ ನಾನು ಕೃತಜ್ಞನನಾಗಿದ್ದೇನೆ. ದೇವೇಗೌಡರು ನನ್ನ ಬೆಳೆಸಿದ್ದಾರೆ. ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಎಚ್.ಕೆ ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದ್ದಾರೆ.
Suicide Case: ಈಶ್ವರಪ್ಪನವರೇ ಮೊದಲು ರಾಜೀನಾಮೆ ನೀಡಿ: ಹೆಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ನಿಂದ ಜನತಾ ಜಲಧಾರೆ ಕಾರ್ಯಕ್ರಮ ಆರಂಭಿಸಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಮುಂದಿನ ಚುನಾವಣೆಯನ್ನ ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯಕ್ರಮ ಹಮ್ಮಿಕೊಂಡಿವೆ. ಕುವೆಂಪು ಅವರ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುವಂತ ಘಟನೆಗಳು ನಡೆಯುತ್ತಿವೆ. ಈ ಬೆಂಕಿಯನ್ನ ಆರಿಸಬಹುದಾಗಿದ್ರೆ ಅದು, ಜೆಡಿಎಸ್‌ನಿಂದ ಮಾತ್ರ ಸಾಧ್ಯ ಅಂತ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ನನಗೆ ಒಂದು ಪಾರ್ಟಿಯಲ್ಲ, ಒಂದು ಕುಟುಂಬ
ಇನ್ನು ಇದೇ ವೇಳೆ ಮಾತನಾಡಿದ ಸಿಎಂ ಇಬ್ರಾಹಿಂ, ಜೆಡಿಎಸ್ ನನಗೆ ಒಂದು ಪಾರ್ಟಿಯಲ್ಲ, ಒಂದು ಕುಟುಂಬ ಇದ್ದ ಹಾಗೆ. 2023 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗ್ತಾರೆ. ನಾನು ಇಲ್ಲಿಯವರೆಗೂ ಹೇಳಿದ್ದು ಯಾವುದು ಸುಳ್ಳಾಗಿಲ್ಲ. ದೇವೇಗೌಡರ ಸಮ್ಮುಖದಲ್ಲೇ ಕುಮಾರಸ್ವಾಮಿ ಅವರ ಪಟ್ಟಾಭಿಷೇಕ ಮಾಡುವ ಕೆಲಸ ಜನರು ಮಾಡ್ತಾರೆ. ನಮಗೆ ಮತಗಳ ಚಿಂತೆಯಿಲ್ಲ. ನಾಡಿನ ಜನತೆಯ ಚಿಂತೆ ಇದೆ. ಕಾಂಗ್ರೆಸ್, ಬಿಜೆಪಿಗೆ ಬರೀ ಓಟಿನ ಚಿಂತೆ. ಯಾವಾಗ ನೋಡಿದ್ರು ಓಟು, ಓಟು ಅಂತಾರೆ ಅಂತ ಎರಡೂ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ