
ಬೆಂಗಳೂರು : ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮತದಾರರಿಗೆ ಮತದಾನ ಮಾಡಲು ವೇತನ ಸಹಿತ ರಜೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ನ.6 ಮತ್ತು 11ರಂದು ಬಿಹಾರದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಬಿಹಾರ ಮತದಾರರು ವಾಸವಿದ್ದು, ಇಲ್ಲಿನ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಬಿಹಾರ ಚುನಾವಣೆಯಲ್ಲಿ ಭಾಗಿಯಾಗಲು ಖಾಸಗಿ ಸಂಸ್ಥೆಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್, ಗುತ್ತಿಗೆದಾರರು, ಅಂಗಡಿ ಮುಂಗಟ್ಟುಗಳು ಸೇರಿ ಇತರ ಉದ್ದಿಮೆಗಳು ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡಬೇಕು. ಆ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿ ನಡೆಯುತ್ತಿರುವ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆಯ ಮಾತುಗಳನ್ನಾಡಿದ್ದಾರೆ. ಈ ವಿಚಾರಗಳು ಹೆಚ್ಚಿನ ಚರ್ಚೆಯಾಗುತ್ತಿರುವಾಗಲೇ ಡಿ.ಕೆ. ಶಿವಕುಮಾರ್ ಬುಧವಾರ ಮಧ್ಯಾಹ್ನ ದೆಹಲಿಗೆ ತೆರಳುತ್ತಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆಗೆ ಬರುತ್ತಿರುವ ಕಾರಣ, ವಕೀಲರೊಂದಿಗೆ ಚರ್ಚೆ ನಡೆಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿರುವ ಕುರಿತು ಉಪಮುಖ್ಯಮಂತ್ರಿ ಅವರ ಕಚೇರಿ ಮಾಹಿತಿ ನೀಡಿದೆ.
ಆದರೆ, ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗಳಿರುವಾಗಲೇ ದೆಹಲಿಗೆ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ದೆಹಲಿಗೆ ತೆರಳುವ ಡಿ.ಕೆ. ಶಿವಕುಮಾರ್, ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ