ಪಂಚಮಸಾಲಿ ಮೀಸಲು ಬಗ್ಗೆ ನಾಡಿದ್ದು ನಿರ್ಧಾರ?

Published : Mar 22, 2023, 04:38 AM IST
ಪಂಚಮಸಾಲಿ ಮೀಸಲು ಬಗ್ಗೆ ನಾಡಿದ್ದು ನಿರ್ಧಾರ?

ಸಾರಾಂಶ

ಮುಂದಿನ ವಾರಾಂತ್ಯದ ವೇಳೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುವ ಸಂಭವವಿದೆ. ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿರುವುದರಿಂದ ಬಹುಶಃ ಶುಕ್ರವಾರದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವುದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ. 

ಬೆಂಗಳೂರು(ಮಾ.22):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಕೊನೆಯದು ಎನ್ನಲಾಗಿರುವ ಮಹತ್ವದ ಸಭೆ ಶುಕ್ರವಾರ ನಡೆಯಲಿದ್ದು, ಸಾಕಷ್ಟು ಚರ್ಚೆಗೆ ಈಡು ಮಾಡಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಇದಲ್ಲದೆ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ವಿವಿಧ ಸಮುದಾಯಗಳನ್ನು ಓಲೈಸುವ ನಿಟ್ಟಿನಲ್ಲಿ ಹಲವು ಪ್ರಮುಖ ಕೊಡುಗೆಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮುಂದಿನ ವಾರಾಂತ್ಯದ ವೇಳೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡುವ ಸಂಭವವಿದೆ. ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಗೆ ಬರಲಿರುವುದರಿಂದ ಬಹುಶಃ ಶುಕ್ರವಾರದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವುದಕ್ಕೆ ಸೀಮಿತವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪಂಚಮಸಾಲಿ ಹೋರಾಟಕ್ಕೆ ಎಂ.ಬಿ.ಪಾಟೀಲ ಬೆಂಬಲ

ಸುಳಿವು ನೀಡಿದ ಸಿಎಂ:

ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಶುಕ್ರವಾರದ ಸಚಿವ ಸಂಪುಟ ಸಭೆಯ ಬಳಿಕ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಹೇಳುವ ಮೂಲಕ ಸುಳಿವು ನೀಡಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘2ಎ ಪ್ರವರ್ಗದಲ್ಲಿರುವ ಸಮುದಾಯಗಳನ್ನು 3ಬಿ ಗೆ ಸ್ಥಳಾಂತರಿಸುವ ಯಾವುದೇ ಪ್ರಸ್ತಾಪ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತ್ವತ್ವದಲ್ಲಿ ಸುದೀರ್ಘ ಕಾಲದಿಂದ ಧರಣಿ ನಡೆಯುತ್ತಿದೆ. ಕಳೆದ ವಾರವಷ್ಟೇ ಮೀಸಲಾತಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್‌ ಹೆಗ್ಡೆ ಅವರು ಮಧ್ಯಂತರ ವರದಿಯನ್ನೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ. ಅದರ ಆಧಾರದ ಮೇಲೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಧಕ್ಕೆ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪರಿಹಾರೋಪಾಯ ಪ್ರಕಟಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಠಾಧೀಶರನ್ನು ಚುನಾವಣಾ ಅಖಾಡಕ್ಕೆ ಇಳಿಸುವ ವಿಚಾರ: 'ನೋ ಕಾಮೆಂಟ್ಸ್' ಎಂದ ವಚನಾನಂದಶ್ರೀ

ಪಂಚಮಸಾಲಿ ಬೆನ್ನಲ್ಲೇ ಇತರ ಕೆಲವು ಸಮುದಾಯಗಳೂ 2ಎ ಮೀಸಲಾತಿ ನೀಡುವಂತೆ ಬೇಡಿಕೆ ಇಟ್ಟಿರುವುದರಿಂದ ಸಂಪುಟ ಸಭೆಯಲ್ಲಿ ಯಾವೆಲ್ಲ ರೀತಿ ಸಮಾಧಾನ ಮಾಡಲಿದ್ದಾರೆ ಎಂಬುದು ಕುತೂಹಲಕರವಾಗಿದೆ.

ನೇರ ವೇತನ ಪಾವತಿ:

ಇದೇ ವೇಳೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆಯೂ ಶುಕ್ರವಾರದ ಸಂಪುಟ ಸಭೆಯಲ್ಲಿ ನಿರ್ಧಾರ ಹೊರಬೀಳುವ ಸಂಭವವಿದೆ. ಈ ಸಂಬಂಧ ಗುತ್ತಿಗೆ ನೌಕರರು ಹಲವು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.

ಮತ್ತೆ ನಾನೇ ಸಿಎಂ

ಮುಂದಿನ ಬಾರಿಯೂ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಶುಕ್ರವಾರ ಮಾಹಿತಿ ನೀಡಲಾಗುತ್ತದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!