IMA ಹಗರಣ: ಠೇವಣಿದಾರರಿಗೆ ಹಣ ಹಿಂದಿರುಗಿಸಲು ಕ್ರಮ

By Kannadaprabha NewsFirst Published Oct 9, 2020, 11:15 AM IST
Highlights

ಠೇವಣಿದಾರರಿಗೆ ಭಾಗಶಃ ಹಣ ಹಿಂದಿರುಗಿಸಲು ಕ್ರಮ| ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ| ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ| 

ಬೆಂಗಳೂರು(ಅ.09): ಐಎಂಎ ಹಗರಣ ಹಿನ್ನೆಲೆಯಲ್ಲಿ ಠೇವಣಿದಾರರಿಗೆ ಭಾಗಶಃ ಹಣವನ್ನು ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲ ವಿಜಯಕುಮಾರ್‌ ಪಾಟೀಲ್‌, ಠೇವಣಿದಾರರ ಆಧಾರ್‌ ಧೃಢೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಒಮ್ಮೆ ದೃಢೀಕರಣ ಲಭ್ಯವಾದ ಬಳಿಕ ಠೇವಣಿದಾರರಿಗೆ ಭಾಗಶಃ ಹಣ ಹಿಂದಿರುಗಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್‌, ಕೊರೋನಾ ಹಾಗೂ ಲಾಕ್‌ಡೌನ್‌ ಕಾರಣಕ್ಕಾಗಿ ತನಿಖೆಯಲ್ಲಿ ಸ್ವಲ್ಪ ನಿಧಾನವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಐಎಂಎ ಕೇಸ್: ಹಗರಣದಲ್ಲಿ ಇಬ್ಬರು ಪೊಲೀಸರು?

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 2020ರ ಜೂ.30ರಂದು ಸಿಬಿಐ ಐದನೇ ತನಿಖಾ ಪ್ರಗತಿ ವರದಿ ಸಲ್ಲಿಸಿದೆ. ಅದಾಗಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಅ.20ರೊಳಗೆ ಆರನೇ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕೆಂದು ಸಿಬಿಐ ಪರ ವಕೀಲರಿಗೆ ಸೂಚಿಸಿತು.

ಅಲ್ಲದೆ, 2020ರ ಮಾ.5ರಂದು ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ಪ್ರಮಾಣಪತ್ರ ಸಲ್ಲಿಸಬೇಕು. ಪ್ರಕರಣದಲ್ಲಿ ಮೊದಲಿನಿಂದ ಅ.15ರವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಕ್ಷಮ ಪ್ರಾಧಿಕಾರ ವರದಿ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.
 

click me!