
ಬೆಂಗಳೂರು(ಜೂ.30): ರಾಜ್ಯದಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಇನ್ನೆರಡು ವಾರಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆಯ ಡಿ.ಆರ್. ಶಾರದಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಈ ವಿಷಯ ತಿಳಿಸಿದರು.
ಆನ್‌ಲೈನ್ ಗ್ಯಾಂಬ್ಲಿಂಗ್‌ಗೆ ಬೀಳಲಿದೆ ಬ್ರೇಕ್, ಸುಳಿವು ಕೊಟ್ಟಿದ್ದಾರೆ ಗೃಹ ಸಚಿವ ಬೊಮ್ಮಾಯಿ
ಇದಕ್ಕೂ ಮುನ್ನ ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸುವ ಕುರಿತು ಸ್ಪಷ್ಟನಿಲುವು ತಿಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಈ ವಿಚಾರವಾಗಿ ಒಂದು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶಿಸಿತು.
ಸರ್ಕಾರದ ಪರ ವಕೀಲರ ಹೇಳಿಕೆಗೆ ಬೇಸರಗೊಂಡ ನ್ಯಾಯಪೀಠ, ಅನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸುವ ಸಂಬಂಧ ಸ್ಪಷ್ಟನಿಲುವು ತಿಳಿಸುವಂತೆ 2021ರ ಫೆ.16ರಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ, ಈವರೆಗೂ ಸರ್ಕಾರದ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸಾಕಷ್ಟು ಬಾರಿ ಹೇಳಿದರೂ ನ್ಯಾಯಾಲಯದ ನಿರ್ದೇಶನಗಳ ಪಾಲಿಸಿಲ್ಲ. ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ. ಇಷ್ಟೊಂದು ಹಿಂಜರಿಕೆ ಏಕೆ. ಕಳೆದ ನಾಲ್ಕು ತಿಂಗಳಿಂದ ಸರ್ಕಾರ ಕಾಲಾವಕಾಶ ಕೇಳುತ್ತಲೇ ಇದೆ ಎಂದು ತರಾಟೆಗೆ ತೆಗೆದುಕೊಂಡಿತು. ಈ ವಿಚಾರದಲ್ಲಿ ಒಂದು ವಾರದಲ್ಲಿ ಪ್ರಮಾಣ ಪತ್ರ ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜು.8ಕ್ಕೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ