ಈ ಹಿಂದೆ ಗೃಹಲಕ್ಷ್ಮಿ ಯೋಜನೆಗೆ ಆ.20ರಂದು ಚಾಲನೆ ನೀಡಲಾಗುವುದು ಎಂದು ಹೇಳಲಾಗಿತ್ತು. ಆ ಬಳಿಕ ಅದು ಆ.27ಕ್ಕೆ ಮುಂದೂಡಲ್ಪಟ್ಟಿತ್ತು. ಇದೀಗ ಮೂರನೇ ಬಾರಿಗೆ ಮುಂದಕ್ಕೆ ಹೋಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ(ಆ.12): ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಮಹತ್ವದ್ದಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಯೋಜನೆಗೆ ಆ.29 ಅಥವಾ ಆ.30 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ನಗರದ ಸಿಪಿಎಡ್ ಆವರಣ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದರು. ಈ ಹಿಂದೆ ಗೃಹಲಕ್ಷ್ಮಿ ಯೋಜನೆಗೆ ಆ.20ರಂದು ಚಾಲನೆ ನೀಡಲಾಗುವುದು ಎಂದು ಹೇಳಲಾಗಿತ್ತು. ಆ ಬಳಿಕ ಅದು ಆ.27ಕ್ಕೆ ಮುಂದೂಡಲ್ಪಟ್ಟಿತ್ತು. ಇದೀಗ ಮೂರನೇ ಬಾರಿಗೆ ಮುಂದಕ್ಕೆ ಹೋಗಿದೆ.
ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ, ಬಿಬಿಎಂಪಿ ಅಧಿಕಾರಿಗಳು ತಲಾ 2000 ಜನರನ್ನು ಕರೆತರಬೇಕು; ಎನ್.ಆರ್. ರಮೇಶ್ ಆರೋಪ
ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದ ಅವರು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಒಂದೊಂದು ವಿಭಾಗದಲ್ಲಿ ಚಾಲನೆ ನೀಡಲುದ್ದೇಶಿಸಿದ್ದೆವು. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರಗಿಯಲ್ಲಿ ಗೃಹಜ್ಯೋತಿಗೆ ಚಾಲನೆ ನೀಡಲಾಗಿದೆ. ಈಗ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದೇವೆ. ಐದನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಯ ಲಾಭ ಪಡೆಯಲು 1.06 ಕೋಟಿ ಜನ ಅರ್ಜಿ ಹಾಕಿದ್ದಾರೆ. ಹೆಚ್ಚಿನ ಜನ ಅನುಕೂಲ ಪಡೆಯಲಿ ಎಂದು ಎಲ್ಲರಿಗೂ ಉಚಿತವಾಗಿ ಸರ್ಕಾರದಿಂದಲೇ ಅರ್ಜಿ ತುಂಬಿಸಲಾಗುತ್ತಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದರು.