ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗಾಯ!

Published : Jul 16, 2025, 12:41 PM IST
Hassan KSRTC Bus Accident

ಸಾರಾಂಶ

ವೆಂಕಟಿಹಳ್ಳಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಕಲೇಶಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಹಾಸನ (ಜು.16): ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ವೆಂಕಟಿಹಳ್ಳಿ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಯಂತೆ, ಮೂಡಿಗೆರೆ ಕಡೆಗೆ ತೆರಳುತ್ತಿದ್ದ ಒಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಸಕಲೇಶಪುರ ಕಡೆಗೆ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ನಡುವೆ ರಸ್ತೆಯಲ್ಲಿ ಡಿಕ್ಕಿಯಾಗಿದೆ. ಬಸ್‌ಗಳಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸ್ಥಳೀಯ ಜನರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡ ಎಲ್ಲಾ ಪ್ರಯಾಣಿಕರನ್ನು ಕೂಡಲೇ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಇತರರಿಗೆ ಮಧ್ಯಮ ಮಟ್ಟದ ಗಾಯಗಳು ಉಂಟಾಗಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂಬುದು ಸ್ಥಳೀಯರಿಗೆ ನಿಟ್ಟುಸಿರು ಬಿಡುವಂತಾಗಿದೆ.

ಪೊಲೀಸ್ ತನಿಖೆ ಪ್ರಾರಂಭ

ಘಟನೆ ನಡೆದ ಸ್ಥಳ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುವುದರಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಬೇಕಾದ್ದು ಸದ್ಯ ತನಿಖೆಯಲ್ಲಿದೆ. ವಾಹನಗಳ ವೇಗ, ಚಾಲಕರ ಅಜಾಗರೂಕತೆ ಅಥವಾ ರಸ್ತೆಯ ಸನ್ನಿವೇಶವೇ ಕಾರಣವೇ ಎಂಬ ಬಗ್ಗೆ ಸ್ಪಷ್ಟತೆ ಬರಬೇಕಿದೆ.

ಇನ್ನು ರಸ್ತೆಯ ತಿರುವಿನಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಬೇಕು. ರಸ್ತೆಯ ತಿರುವು ಅವೈಜ್ಞಾನಿಕವಾಗಿದ್ದು, ದೊಡ್ಡ ವಾಹನಗಳು ಬಂದಲ್ಲಿ ಇಂತಹ ಅಪಘಾತಗಳು ಸಂಭವಿಸುತ್ತಿರುತ್ತವೆ. ಇಲ್ಲಿ ಅಪಘಾತ ವಲಯ ಎಂಬ ಸಣ್ಣ ಸುಳಿವೂ ಸಿಗುವುದಿಲ್ಲ. ಹೀಗಾಗಿ, ಕೂಡಲೇ ಲೋಕೋಪಯೋಗಿ ಇಲಾಖೆಯಿಂದ ಅವೈಜ್ಞಾನಿಕ ರಸ್ತೆಯನ್ನು ಸರಿಪಡಿಸಿ, ಸೂಚನಾ ಫಲಕಗಳನ್ನು ಅಳವಡಿಕೆ ಮಾಡಬೇಕು. ಈ ಮೂಲಕ ಅಪಘಾತ ನಿಯಂತ್ರಣಕ್ಕೆ ಮುಂದಾಗಬೇಕು ಎಂಸು ಸ್ಥಳೀಯರು ಆಗ್ರಹ ಮಾಡಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಹಳ್ಳಕ್ಕೆ ಉರುಳಿದ ಬಸ್:

ಇನ್ನು ಕಳೆದ ಎರಡು ದಿನಗಳ ಹಿಂದಷ್ಟೇ (ಜು.14ರಂದು ಮಧ್ಯಾಹ್ನ) ಮೈಸೂರು–ಬೆಂಗಳೂರು ಹಳೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಕರಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಈ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರದ ಬಳಿ ಮಧ್ಯಾಹ್ನದ ಸಮಯದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿಪೋಗೆ ಸೇರಿದ ಬಸ್ ಚನ್ನಪಟ್ಟಣದಲ್ಲಿ ಸಂಭವಿಸಿದ ಅಪಘಾತ ಪ್ರಕರಣವನ್ನು ಇತ್ಯರ್ಥ ಮಾಡಿಕೊಂಡು ಪೊಲೀಸ್ ಠಾಣೆಯಿಂದ ಬಿಡಿಸಿಕೊಂಡು ಪುತ್ತೂರು ಕಡೆಗೆ ಕಂಡಕ್ಟರ್ ಸಮೇತವಾಗಿ ಖಾಲಿ ಬಸ್ ಸಾಗುತ್ತಿತ್ತು. ಆದರೆ, ಖಾಲಿ ಬಸ್ಸನ್ನು ಕೊಂಡೊಯ್ಯುತ್ತಿದ್ದ ಚಾಲಕನ ನಿರ್ಲಕ್ಷ್ಯದಿಂದ ಬೊಮ್ಮೂರು ಅಗ್ರಹಾರದ ಬಳಿ ಬಸ್‌ ರಸ್ತೆ ಬದಿಯಲ್ಲಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಈ ಘಟನೆಯು ಮೈಸೂರು-ಬೆಂಗಳೂರು ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳ ಸಾಲಿಗೆ ಮತ್ತೊಂದು ಉದಾಹರಣೆ ಎಂಬಂತಾಗಿದೆ. ಪ್ರಯಾಣಿಕರಿಲ್ಲದ ಕಾರಣ ಬೃಹತ್ ಅನಾಹುತ ತಪ್ಪಿದರೂ, ಚಾಲಕರ ನಿರಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳ ಕಡೆಗಣನೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!