
ಪುತ್ತೂರು (ಜ.21): ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಮತ್ತು ಕೋಮುದ್ವೇಷ ಪ್ರಚೋದಿಸುವಂತಹ ಭಾಷಣ ಮಾಡಿದ ಆರೋಪದಡಿ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಳೆದ ಜನವರಿ 12 ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುವಾಗ, ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಕೆ. ಅವರು ಈ ಕುರಿತು ಪೋಲೀಸರಿಗೆ ದೂರು ನೀಡಿದ್ದಾರೆ. 'ಪ್ರಭಾಕರ ಭಟ್ ಅವರು ಸಮಾಜದಲ್ಲಿ ದ್ವೇಷ ಬಿತ್ತಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಅದರ ಉಲ್ಲಂಘನೆ ಮಾಡಿ ಮತ್ತೆ ಹಿಂಸೆಯನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ' ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲು
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇವಲ ಪ್ರಭಾಕರ ಭಟ್ ಮಾತ್ರವಲ್ಲದೆ, ಈ ಭಾಷಣವನ್ನು ನೇರ ಪ್ರಸಾರ ಮಾಡಿ ಸಾರ್ವಜನಿಕವಾಗಿ ಹರಡಲು ಕಾರಣವಾದ 'ವಿಕಸನ ಟಿವಿ' (VIKASANA TV) ಎಂಬ ಯೂಟ್ಯೂಬ್ ಚಾನಲ್ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.
ಷರತ್ತು ಉಲ್ಲಂಘನೆಯ ಗಂಭೀರ ಆರೋಪ
ಹಿಂದಿನ ಪ್ರಕರಣಗಳಲ್ಲಿ ಜಾಮೀನು ಪಡೆಯುವಾಗ 'ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ' ಎಂಬ ಷರತ್ತಿಗೆ ಕಲ್ಲಡ್ಕ ಪ್ರಭಾಕರ ಭಟ್ ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ ಈಗ ಮತ್ತೆ ಪುನಃ ಅದೇ ರೀತಿಯ ಪ್ರಚೋದನಾಕಾರಿ ಭಾಷಣ ಮಾಡಿರುವುದು ಅವರಿಗೆ ಕಾನೂನುಬದ್ಧವಾಗಿ ದೊಡ್ಡ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ